ಆಸ್ಪತ್ರೆಯಿಂದ ಬಿಡುಗಡೆಯಾದ ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಜೂ. 7: ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸಂಪೂರ್ಣ ಗುಣಮುಖರಾಗಿದ್ದು, ಅವರು ಇದೀಗ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜೂ.1ರಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಮ್ಮ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ವಿಶ್ರಾಂತಿಯ ಮೊರೆ ಹೋಗಿದ್ದರು. ಆದರೆ, ವೈದ್ಯರ ಸಲಹೆ ಹಿನ್ನೆಲೆಯಲ್ಲಿ ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಈ ಮಧ್ಯೆ ಅವರು ಎರಡು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು, ಎರಡು ಬಾರಿಯ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿತ್ತು.
ಐದಾರು ದಿನಗಳ ಕಾಲ ಆಸ್ಪತ್ರೆಯಲ್ಲಿದ್ದ ಅವರು ಸಂಪೂರ್ಣ ಗುಣಮುಖರಾಗಿದ್ದು, ಇದೀಗ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಆಸ್ಪತ್ರೆಯಿಂದ ಹೊರಟ ಸಿದ್ದರಾಮಯ್ಯ ಅವರನ್ನು ಅವರಿಗೆ ಚಿಕಿತ್ಸೆ ನೀಡಿದ ಮಣಿಪಾಲ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಬೀಳ್ಕೊಟ್ಟರು.
ಅಲ್ಪಕಾಲದ ಅಸ್ವಸ್ಥತೆಯಿಂದ ಗುಣಮುಖನಾಗಿ ಇಂದು ಮನೆಗೆ ಬಂದಿದ್ದೇನೆ. ನನ್ನ ಆರೋಗ್ಯದ ಆರೈಕೆಯನ್ನು ಕಾಳಜಿಯಿಂದ ಮಾಡಿದ ನಗರದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ನಾನು ಋಣಿಯಾಗಿದ್ದೇನೆ. ನನ್ನ ಆರೋಗ್ಯಕ್ಕಾಗಿ ಪ್ರೀತಿಯಿಂದ ಹಾರೈಸಿದ ರಾಜ್ಯದ ಎಲ್ಲ ಬಂಧುಗಳಿಗೆ ಹೃತ್ಪೂರ್ವಕವಾದ ಕೃತಜ್ಞತೆಗಳು
-ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ