'ಅಕ್ಷರ ಸಂತ' ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಹೊಸದಿಲ್ಲಿ, ನ.8: ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ಭಾರತ ಸರಕಾರ ನೀಡುವ ನಾಲ್ಕನೇ ಅತೀ ದೊಡ್ಡ ನಾಗರಿಕ ಪ್ರಶಸ್ತಿ ‘ಪದ್ಮಶ್ರೀ’ ಇಂದು ಪ್ರದಾನ ಮಾಡಲಾಯಿತು.
ರಾಷ್ಟ್ರಪತಿ ಭವನದಲ್ಲಿ ಇಂದು ಬೆಳಗ್ಗೆ ಜರುಗಿದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ತಮ್ಮ ಎಂದಿನ ಸರಳ ಉಡುಗೆಯಲ್ಲಿ ವೇದಿಕೆಯೇರಿದ ಹಾಜಬ್ಬ ಪ್ರಶಸ್ತಿ ಸ್ವೀಕರಿಸಿದರು.
ಸಮಾರಂಭದಲ್ಲಿ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.
ಬಡಮಕ್ಕಳಿಗಾಗಿ ಸ್ವಂತ ದುಡಿಮೆಯಲ್ಲಿ ಶಾಲೆ ನಿರ್ಮಿಸಿದ, ನೂರಾರು ಮಕ್ಕಳ ವಿದ್ಯಾರ್ಜನೆಗೆ ನೆರವಾದ ಕಿತ್ತಳೆ ವ್ಯಾಪಾರಿಯಾಗಿದ್ದ ಹರೇಕಳ ಹಾಜಬ್ಬರನ್ನು ಕೇಂದ್ರ ಸರಕಾರವು 2020ನೆ ಸಾಲಿನ 'ಪದ್ಮಶ್ರೀ' ಪ್ರಶಸ್ತಿಗೆ ಆಯ್ಕೆ ಮಾಡಿ 2020ರ ಜನವರಿ 25ರಂದು ಘೋಷಿಸಿತ್ತು. ಅದೇವರ್ಷ ಮಾರ್ಚ್ ತಿಂಗಳಲ್ಲಿ ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನೂ ಸರಕಾರ ನಿಗದಿಪಡಿಸಿತ್ತು. ಆದರೆ ಕೋವಿಡ್-19 ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ್ದರಿಂದ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು.