ಉಡುಪಿ: ಐವರು ಕೊರೋನಕ್ಕೆ ಪಾಸಿಟಿವ್
ಉಡುಪಿ, ನ.20: ಜಿಲ್ಲೆಯಲ್ಲಿ ಶನಿವಾರ ಸಹ ಐವರು ಕೊರೋನ ಸೋಂಕಿಗೆ ಪಾಸಿಟಿವ್ ಬಂದಿದ್ದಾರೆ. ದಿನದಲ್ಲಿ ಮೂವರು ಸೋಂಕಿನಿಂದ ಗುಣಮುಖರಾದರೆ, 52 ಮಂದಿ ಇನ್ನೂ ಚಿಕಿತ್ಸೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ದಿನದಲ್ಲಿ ಮೂವರು ಪುರುಷರು ಹಾಗೂ ಇಬ್ಬರು ಮಹಿಳೆಯರಲ್ಲಿ ಸೋಂಕು ಕಂಡುಬಂದಿದೆ. ಇವರೆಲ್ಲರೂ ಉಡುಪಿ ತಾಲೂಕಿನವರಾಗಿದ್ದಾರೆ. ಪಾಸಿಟಿವ್ ಬಂದ ಒಬ್ಬರಿಗೆ ಆಸ್ಪತ್ರೆಯಲ್ಲಿ ಉಳಿದ ನಾಲ್ವರಿಗೆ ಅವರವರ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಹ ಜಿಲ್ಲೆಯಲ್ಲಿ ಕೊರೋನದಿಂದ ಯಾರೂ ಮೃತಪಟ್ಟ ವರದಿ ಬಂದಿಲ್ಲ.
ಶುಕ್ರವಾರ ಸೋಂಕಿನಿಂದ ಮೂವರು ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 76,292ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 1712 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 76,820ಕ್ಕೇರಿದೆ.
4,976 ಮಂದಿಗೆ ಲಸಿಕೆ: ಇಂದು ಜಿಲ್ಲೆಯಲ್ಲಿ ಒಟ್ಟು 4976 ಮಂದಿ ಕೋವಿಡ್ ಲಸಿಕೆ ಸ್ವೀಕರಿಸಿದ್ದಾರೆ. ಇವರಲ್ಲಿ 371 ಮಂದಿ ಮೊದಲ ಡೋಸ್ ಹಾಗೂ 4605 ಮಂದಿ ಎರಡನೇ ಡೋಸ್ ಸ್ವೀಕರಿಸಿದ್ದಾರೆ ಎಂದು ಡಿಎಚ್ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
ಲಸಿಕೆ ಪಡೆದವರಲ್ಲಿ 18 ವರ್ಷದಿಂದ 44 ವರ್ಷದೊಳಗಿನ 269 ಮಂದಿ ಮೊದಲ ಡೋಸ್ ಹಾಗೂ 3443 ಮಂದಿ ಎರಡನೇ ಡೋಸ್ ಲಸಿಕೆಯನ್ನು ಸ್ವೀಕರಿಸಿದರೆ, 45 ವರ್ಷ ಮೇಲಿನ 102 ಮೊದಲ ಡೋಸ್ ಹಾಗೂ 1151 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಅಲ್ಲದೇ ಎಂಟು ಮಂದಿ ಆರೋಗ್ಯ ಕಾರ್ಯಕರ್ತರು ಮತ್ತು ಮೂವರು ಮುಂಚೂಣಿ ಕಾರ್ಯಕರ್ತರು ಸಹ ಎರಡನೇ ಡೋಸ್ ಲಸಿಕೆ ಸ್ವೀಕರಿಸಿದ್ದಾರೆ.