ಪಾಕ್: ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಉಗ್ರರಿಂದ ರಾಕೆಟ್ ದಾಳಿ, ಕನಿಷ್ಠ ಐವರು ಪೊಲೀಸರ ಸಾವು
ಪೇಶಾವರ, ಎ.12: ಪಾಕಿಸ್ತಾದ ಪ್ರಕ್ಷುಬ್ಧ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಪೊಲೀಸರ ವ್ಯಾನ್ ಮೇಲೆ ಭಯೋತ್ಪಾದಕರು ನಡೆಸಿದ ರಾಕೆಟ್ ದಾಳಿಯಲ್ಲಿ ಕನಿಷ್ಠ ಐವರು ಪೊಲೀಸರು ಸಾವನ್ನಪ್ಪಿದ್ದಾರೆ ಹಾಗೂ ಮೂರು ಮಂದಿ ಗಾಯಗೊಂಡಿದ್ದಾರೆಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ದಿಖಾನ್ ಜಿಲ್ಲೆಯಲ್ಲಿರುವ ಕುಲಾಚಿ ತಹಶೀಲ್ ನಲ್ಲಿ ಎಂದಿನಂತೆ ಗಸ್ತು ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸ್ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.
ರಾಕೆಟ್ ದಾಳಿಯ ಬಳಿಕ ಉಗ್ರರು ಮನಬಂದಂತೆ ಗುಂಡುಹಾರಿಸಿದ್ದು, ಐವರು ಪೊಲೀಸರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಹಾಗೂ ಡಿಎಸ್ಪಿ ಫಝಲ್ ಸುಭಾನ್ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ. ದಾಳಿಯ ಬಳಿಕ ಭಯೋತ್ಪಾದಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಪೊಲೀಸ್ ವ್ಯಾನ್ ಸಂಪೂರ್ಣವಾಗಿ ಹಾನಿಗೀಡಾಗಿದೆಯೆಂದು ಪೊಲೀಸರು ತಿಳಿಸಿದ್ದಾರೆ.
ದಾಳಿಯ ಬಳಿಕ ಸ್ಥಳಕ್ಕೆ ಧಾವಿಸಿದ ಭದ್ರತಾಪಡೆಗಳು ಇಡೀ ಪ್ರದೇಶವನ್ನು ಸುತ್ತುವರಿದಿದ್ದು, ಉಗ್ರರನ್ನು ಬಂಧಿಸಲು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ.