ಜನಪ್ರತಿನಿಧಿಗಳ ವಿರುದ್ಧವೂ ಸೇರಿದಂತೆ 61 ಕ್ರಿಮಿನಲ್ ಪ್ರಕರಣ ಹಿಂಪಡೆಯಲು ಸಂಪುಟ ಉಪ ಸಮಿತಿಯಿಂದ ತುರ್ತು ಸಭೆ?
ಬೆಂಗಳೂರು, ಜು.29: ಚುನಾಯಿತ ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳು ಸೇರಿದಂತೆ 61 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಹೈಕೋರ್ಟ್ 2022ರ ಜುಲೈ 13ರಂದು ಮಧ್ಯಂತರ ಆದೇಶ ಹೊರಡಿಸಿದ್ದರೂ ರಾಜ್ಯ ಗೃಹ ಇಲಾಖೆಯು ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಸಲು ಮುಂದಾಗಿದೆ.
ಚುನಾಯಿತ ಜನಪ್ರತಿನಿಧಿಗಳ ವಿರುದ್ಧ ಇರುವ ಪ್ರಕರಣಗಳು ಸೇರಿದಂತೆ 61 ಪ್ರಕರಣಗಳನ್ನು ಹಿಂಪಡೆದಿದ್ದ ರಾಜ್ಯ ಸರಕಾರವು 2020ರ ಆಗಸ್ಟ್ 31ರಂದು ಹೊರಡಿಸಿರುವ ಆದೇಶವನ್ನು ಸುಧಾ ಕಾಟ್ವಾ ಎಂಬುವರು ಪ್ರಶ್ನಿಸಿ ಸಲ್ಲಿಸಿದ್ದ ಮನವಿ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮತ್ತು ಜೆ.ಎಂ. ಖಾಝಿ ಅವರಿದ್ದ ಪೀಠವು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಪುನರುಚ್ಛರಿಸಿದೆ.
ಮಂಗಳೂರಿನ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಧ್ಯರಾತ್ರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದಿದ್ದರಿಂದಲೇ ಇಂತಹ ಅಪರಾಧ ಕೃತ್ಯಗಳು ನಡೆಯುತ್ತಿವೆ ಎಂದು ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಹೈಕೋರ್ಟ್ ಜುಲೈ 13ರಂದು ನೀಡಿದ್ದ ಮಧ್ಯಂತರ ಆದೇಶ ಮತ್ತು ರಾಜ್ಯದ ಒಳಾಡಳಿತ ಇಲಾಖೆಯು ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಸಭೆ ನಡೆಸುತ್ತಿರುವುದು ಮಹತ್ವ ಪಡೆದುಕೊಂಡಿದೆ.
ಕಾನೂನು, ಸಂಸದೀಯ ವ್ಯವಹಾರಗಳು, ಅರಣ್ಯ, ಆರೋಗ್ಯ, ಕುಟುಂಬ ಕಲ್ಯಾಣ, ಗೃಹ, ಪ್ರಾಥಮಿಕ, ಪ್ರೌಢಶಿಕ್ಷಣ, ಇಂಧನ, ಕನ್ನಡ ಸಂಸ್ಕೃತಿ, ಗಣಿ, ಭೂ ವಿಜ್ಞಾನ, ಮಹಿಳಾ ಮಕ್ಕಳ ಅಭಿವೃದ್ಧಿ, ಸರಕಾರದ ಮುಖ್ಯ ಕಾರ್ಯದರ್ಶಿ, ಒಳಾಡಳಿತ ಇಲಾಖೆಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ, ಕಾನೂನು ನ್ಯಾಯ ಮಾನವ ಹಕ್ಕುಗಳ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ, ಒಳಾಡಳಿತ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಅವರ ಆಪ್ತ ಕಾರ್ಯದರ್ಶಿಗಳನ್ನೂ ಸಭೆಗೆ ಆಹ್ವಾನಿಸಲಾಗಿದೆ ಎಂದು ತಿಳಿದು ಬಂದಿದೆ.
ವಿಚಾರಣೆಯಲ್ಲಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ ರಾಜ್ಯ ಸರಕಾರವು ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವುದಕ್ಕೆ ಸಂಬಂಧಿಸಿದಂತೆ ಕಳೆದ ವರ್ಷದ ಸೆಪ್ಟೆಂಬರ್ 16ರಿಂದ ಈಚೆಗಿನ ಪ್ರಕರಣಗಳಲ್ಲಿ ರಾಜ್ಯ ಸರಕಾರದ ನಿಲುವಿನ ಕಾನೂನು ಸಿಂಧುತ್ವವನ್ನು ಪರಿಗಣಿಸಲಾಗುವುದು ಎಂದು ಹೈಕೋರ್ಟ್ ಹೇಳಿತ್ತು.
ಅಲ್ಲದೆ ಪ್ರಕರಣಗಳನ್ನು ಹಿಂಪಡೆಯುವಾಗ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪಾಲಿಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಶಾಸಕರು ಮತ್ತು ಸಂಸದರ ವಿರುದ್ಧದ ಪ್ರಕರಣಗಳ ಕುರಿತಾದ ಮಾಹಿತಿಯನ್ನು ಅಧಿಕೃತವಾಗಿ ಸಲ್ಲಿಸಬೇಕು ಎಂದು ರಾಜ್ಯ ಸರಕಾರಕ್ಕೆ ಪೀಠವು ನಿರ್ದೇಶಿಸಿತ್ತು.
ಚುನಾಯಿತ ಜನಪ್ರತಿನಿಧಿಗಳ ವಿರುದ್ಧ ಇರುವ ಪ್ರಕರಣಗಳು ಸೇರಿದಂತೆ 61 ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ 2020ರ ಆಗಸ್ಟ್ 31ರಂದು ಸರಕಾರ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಮನವಿ ಸಲ್ಲಿಸಲಾಗಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ಅರ್ಜಿಯನ್ನು ವಿಲೇವಾರಿ ಮಾಡಬೇಕು ಎಂದು ಅರ್ಜಿದಾರ ಸಂಸ್ಥೆಯಾದ ಪೀಪಲ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.
ಒಟ್ಟು 70 ಪ್ರಕರಣಗಳಲ್ಲಿ 65 ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ. 5 ಪ್ರಕರಣಗಳು ತನಿಖೆಯಲ್ಲಿವೆ. ಈ ಪ್ರಕರಣಗಳನ್ನು ಹಿಂಪಡೆದಲ್ಲಿ ಕಾನೂನು ಪರಿಪಾಲನೆ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಧಕ್ಕೆ ಉಂಟಾಗುತ್ತದೆ. ಪೊಲೀಸರ ಆತ್ಮಸ್ಥೈರ್ಯಕ್ಕೆ ಧಕ್ಕೆಯಾಗುತ್ತದೆ ಹಾಗೂ ಕಾರ್ಯನಿರ್ವಹಣೆಯ ಮನೋಸ್ಥೈರ್ಯವನ್ನು ಕುಗ್ಗಿಸುತ್ತದೆ ಎಂದು ಡೈರೆಕ್ಟರ್ ಜನರಲ್ ಮತ್ತು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೊಲೀಸ್ ಪರವಾಗಿ ಎಐಜಿಪಿ ರಾಧಿಕಾ ಜಿ. ಅವರು ಸರಕಾರಕ್ಕೆ ಪತ್ರ ಬರೆದಿದ್ದರು.
ಅಲ್ಲದೆ, ಪ್ರಕರಣಗಳನ್ನು ಹಿಂತೆಗೆದುಕೊಳ್ಳುವುದರಿಂದ ಮುಂದೆಯೂ ಸಹ ಇದೇ ರೀತಿಯ ಘಟನೆಗಳು ಮರುಕಳಿಸಿ ನ್ಯಾಯ ಪ್ರಕ್ರಿಯೆ ಮತ್ತು ಕಾನೂನು ಸುವ್ಯವಸ್ಥೆ ಹದಗೆಡುತ್ತದೆ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆಗೆ ಭಂಗ ಉಂಟಾಗುತ್ತದೆ. ಹಾಗೂ ಮುಂದೆಯೂ ಸಹ ಆರೋಪಿಗಳು ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗುವ ಸಂಭವವಿರುತ್ತದೆ. ಆದ್ದರಿಂದ ಈ ಪ್ರಕರಣಗಳನ್ನು ಹಿಂಪಡೆಯಬಾರದು ಎಂದು ಅವರು ಕೋರಿದ್ದರು. ಈ ಕುರಿತು ಆರ್‌ಟಿಐ ಈ ಅಡಿಯಲ್ಲಿ ದಾಖಲೆ ಪಡೆದಿದ್ದ ‘the-file.in’ ಮತ್ತು ‘ವಾರ್ತಾಭಾರತಿ’ ಜೂನ್ 20ರಂದು ವರದಿ ಪ್ರಕಟಿಸಿದ್ದನ್ನು ಸ್ಮರಿಸಬಹುದು.