ಭ್ರಷ್ಟಾಚಾರ ಪ್ರಕರಣ: ಹೈಕೋರ್ಟ್ ಆದೇಶ ಪ್ರಶ್ನಿಸಿ ‘ಸುಪ್ರೀಂ’ ಮೆಟ್ಟಿಲೇರಿದ ಸಚಿವ ಸೋಮಶೇಖರ್
ಬೆಂಗಳೂರು, ಅ.6: ಭ್ರಷ್ಟಾಚಾರ ಆರೋಪದಡಿ ತನಿಖೆ ನಡೆಸುವಂತೆ ಲೋಕಾಯುಕ್ತಕ್ಕೆ ಸೂಚಿಸಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಚಿವ ಎಸ್.ಟಿ.ಸೋಮಶೇಖರ್, ಅಂದಿನ ಬಿಡಿಎ ಆಯುಕ್ತ, ಐಎಎಸ್ ಅಧಿಕಾರಿ ಡಾ. ಜಿ.ಸಿ.ಪ್ರಕಾಶ್ ಹಾಗೂ ಬೆಂಗಳೂರಿನ 37ನೆ ಕ್ರೆಸೆಂಟ್ ಹೋಟೆಲ್ ಮಾಲಕ ಕೆ.ರವಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಸೆ.7ರ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯು ಅ.10ರಂದು ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುಂದೆ ವಿಚಾರಣೆಗೆ ಬರಲಿದೆ. ಸೆ.23ರಂದು ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಮತ್ತು ಕುಟುಂಬಸ್ಥರ ವಿರುದ್ಧದ ಲೋಕಾಯುಕ್ತ ತನಿಖೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಬೆನ್ನಲ್ಲೇ ಆರೋಪಿಗಳ ಪಟ್ಟಿಯಲ್ಲಿರುವ ಈ ಮೂವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣವೇನು?: ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ವಸತಿ ಯೋಜನೆಗಳನ್ನು ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನ್‍ಸ್ಟ್ರಕ್ಷನ್ ಕಂಪೆನಿಯಿಂದ ಕೋಟ್ಯಂತರ ರೂಪಾಯಿಗಳ ಲಂಚ ಪಡೆದಿದ್ದಾರೆ. ಜೊತೆಗೆ ಶೆಲ್ ಕಂಪೆನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಆರ್‍ಟಿಐ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಖಾಸಗಿ ದೂರು ದಾಖಲಿಸಿದ್ದರು. ವಿಶೇಷ ತನಿಖಾ ತಂಡದಿಂದ(ಎಸ್‍ಐಟಿ) ತನಿಖೆ ನಡೆಸಲು ನಿರ್ದೇಶಿಸಬೇಕೆಂದು ಕೋರಿದ್ದರು.
ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿತ್ತು. ಬಳಿಕ ಅಬ್ರಹಾಂ ಅವರು ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶವನ್ನು ಬದಿಗೆ ಸರಿಸಿತ್ತು. ಅಲ್ಲದೆ, ಯಡಿಯೂರಪ್ಪ ಮತ್ತು ಇತರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರನ್ನು ಮರುಪರಿಗಣಿಸಲು ಹೈಕೋರ್ಟ್ ಆದೇಶಿಸಿತ್ತು.
ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ತನಿಖೆಗೆ ಆದೇಶಿಸಿ, 2022ರ ನವೆಂಬರ್ 2ರೊಳಗೆ ಅಂತಿಮ ವರದಿ ಸಲ್ಲಿಸುವಂತೆ ಸೂಚಿಸಿತ್ತು.
ಪ್ರಕರಣದ ಆರೋಪಿಗಳು: ಯಡಿಯೂರಪ್ಪ, ಪುತ್ರ ಬಿ.ವೈ.ವಿಜಯೇಂದ್ರ, ಅವರ ಅಳಿಯ ಸಂಜಯ್ ಶ್ರೀ, ಮೊಮ್ಮಗ ಶಶಿಧರ ಮರಡಿ, ಚಂದ್ರಕಾಂತ್ ರಾಮಲಿಂಗಂ, ಅಂದಿನ ಬಿಡಿಎ ಅಧ್ಯಕ್ಷ ಮತ್ತು ಹಾಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಐಎಎಸ್ ಅಧಿಕಾರಿ ಡಾ.ಜಿ.ಸಿ.ಪ್ರಕಾಶ್, ಕೆ.ರವಿ ಮತ್ತು ವಿರೂಪಾಕ್ಷಪ್ಪ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು.