ನಾಳೆಯಿಂದ (ಅ.11) ಸಿಎಂ ಬೊಮ್ಮಾಯಿ-ಬಿಎಸ್ವೈ ರಾಜ್ಯ ಪ್ರವಾಸ
ಬೆಂಗಳೂರು, ಅ.10: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಮ್ಮಿಕೊಂಡಿರುವ ‘ಭಾರತ ಜೋಡೊ ಯಾತ್ರೆ' ನಿರೀಕ್ಷೆಗೂ ಮೀರಿ ರಾಜ್ಯದಲ್ಲಿ ಸಂಚಲ ಉಂಟು ಮಾಡಿರುವ ಬೆನ್ನಲ್ಲೆ, ಆಡಳಿತರೂಢ ಬಿಜೆಪಿ ನಾಯಕರು ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪಕ್ಷವನ್ನು ಸನ್ನದ್ಧಗೊಳಿಸಲು ರಾಜ್ಯ ಪ್ರವಾಸ ಹಮ್ಮಿಕೊಂಡಿದ್ದಾರೆ.
ಇದರ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಾಳೆ(ಅ.11)ಯಿಂದ 2023ರ ಜ.8ರವರೆಗೆ ರಾಜ್ಯಾದ್ಯಂತ 28 ಜಿಲ್ಲೆಗಳ 52 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ವೇಳೆ ಎಸ್ಸಿ-ಎಸ್ಟಿ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಮೋರ್ಚಾಗಳ ಸಮಾವೇಶಗಳನ್ನು ಆಯೋಜಿಸಲಾಗಿದೆ.
ಈಗಾಗಲೆ ಸೆ.10ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನಾ ಕಾರ್ಯಕ್ರಮ ಮಾಡಿರುವ ಬಿಜೆಪಿ, ಇತ್ತೀಚೆಗಷ್ಟೇ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಮಾವೇಶಗಳ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಿದೆ.
ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅ.11ರಂದು ರಾಯಚೂರು ಹಾಗೂ ಮಸ್ಕಿ, ಅ.12ರಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ, ವಿಜಯನಗರ ಜಿಲ್ಲೆಯ ವಿಜಯನಗರ, ಅ.13ರಂದು ವಿಜಯನಗರ ಜಿಲ್ಲೆಯ ಹೂವಿನಹಡಗಲಿ, ಬಳ್ಳಾರಿ ಜಿಲ್ಲೆಯ ಸಿರಗುಪ್ಪ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.
ಅ.18ರಂದು ಬೀದರ್ ಜಿಲ್ಲೆಯ ಹುಮ್ನಾಬಾದ್, ಔರಾದ್, ಅ.19ರಂದು ಯಾದಗಿರಿ ಜಿಲ್ಲೆಯ ಸುರಪುರ, ಕಲಬುರಗಿ ಜಿಲ್ಲೆಯ ಸೇಡಂ, ಅ.23ರಂದು ಕಲಬುರಗಿ ಜಿಲ್ಲೆಯ ಚಿತ್ತಾಪುರ, ಆಳಂದ, ನ.2ರಂದು ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ರಾಯಭಾಗ, ನ.6ರಂದು ಗದಗ ಜಿಲ್ಲೆಯ ಶಿರಹಟ್ಟಿ, ಧಾರವಾಡ ಜಿಲ್ಲೆಯ ಕುಂದಗೋಳ, ನ.8ರಂದು ಹಾವೇರಿ ಜಿಲ್ಲೆಯ ಹಾನಗಲ್, ಬ್ಯಾಡಗಿ, ನ.9ರಂದು ಬೆಳಗಾವಿ ಜಿಲ್ಲೆಯ ಬೆಳಗಾವಿ ಉತ್ತರ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.
ನ.15ರಂದು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ, ಶಿವಮೊಗ್ಗ ಜಿಲ್ಲೆಯ ಸೊರಬ, ನ.16ರಂದು ಉಡುಪಿ ಜಿಲ್ಲೆಯ ಬೈಂದೂರು, ಕಾಪು, ನ.20ರಂದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ನ.22ರಂದು ದಾವಣಗೆರೆ ಜಿಲ್ಲೆಯ ಜಗಳೂರು, ಹರಿಹರ, ನ.23ರಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಹಾಗೂ ತುಮಕೂರು ಜಿಲ್ಲೆಯ ಸಿರಾ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.
ನ.29ರಂದು ತುಮಕೂರು ಜಿಲ್ಲೆಯ ತುಮಕೂರು ನಗರ ಹಾಗೂ ತುರುವೇಕೆರೆ, ನ.30ರಂದು ಕೋಲಾರ ಜಿಲ್ಲೆಯ ಕೆಜಿಎಫ್ ಹಾಗೂ ಮಾಲೂರು, ಡಿ.4ರಂದು ಬೆಂಗಳೂರು ನಗರದ ಬ್ಯಾಟರಾಯನಪುರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರು, ಡಿ.7ರಂದು ಬೆಂಗಳೂರು ನಗರದ ಗಾಂಧಿ ನಗರ, ಬೆಂಗಳೂರು ದಕ್ಷಿಣ ಹಾಗೂ ಆನೇಕಲ್ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.
ಡಿ.11ರಂದು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ದೇವರ ಹಿಪ್ಪರಗಿ, ಡಿ.13ರಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ, ತೆರದಾಳ, ಡಿ.14ರಂದು ಹಾಸನ ಜಿಲ್ಲೆಯ ಅರಸೀಕೆರೆ, ಸಕಲೇಶಪುರ, ಡಿ.18ರಂದು ಮೈಸೂರು ಜಿಲ್ಲೆಯ ಹುಣಸೂರು, ಮೈಸೂರು ನಗರ, ಡಿ.20ರಂದು ಮಂಡ್ಯ ಜಿಲ್ಲೆಯ ಮದ್ದೂರು, ಮೇಲುಕೋಟೆ, ಡಿ.21ರಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಹಾಗೂ ಚಾಮರಾಜನಗರ, ಡಿ.25ರಂದು ರಾಮನಗರ ಜಿಲ್ಲೆಯ ಮಾಗಡಿ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ.
► ಬಿಜೆಪಿ ಸಮಾವೇಶಗಳು
ಅ.16ರಂದು ಮೈಸೂರಿನಲ್ಲಿ ಎಸ್ಸಿ ಮೋರ್ಚಾ ಸಮಾವೇಶ
ಅ.30ರಂದು ಕಲಬುರಗಿಯಲ್ಲಿ ಹಿಂದುಳಿದ ವರ್ಗಗಳ ಮೋರ್ಚಾ ಸಮಾವೇಶ
ನ.13ರಂದು ಹುಬ್ಬಳ್ಳಿಯಲ್ಲಿ ರೈತ ಮೋರ್ಚಾ ಸಮಾವೇಶ
ನ.27ರಂದು ಶಿವಮೊಗ್ಗದಲ್ಲಿ ಯುವ ಮೋರ್ಚಾ ಸಮಾವೇಶ
ಡಿ.11ರಂದು ಬಳ್ಳಾರಿಯಲ್ಲಿ ಎಸ್ಟಿ ಮೋರ್ಚಾ ಸಮಾವೇಶ
ಡಿ.25ರಂದು ಬೆಂಗಳೂರಿನಲ್ಲಿ ಮಹಿಳಾ ಮೋರ್ಚಾ ಸಮಾವೇಶ
ಜ.8ರಂದು ವಿಜಯಪುರದಲ್ಲಿ ಅಲ್ಪಸಂಖ್ಯಾತರ ಮೋರ್ಚಾ ಸಮಾವೇಶ
--------------------------------------------------------------
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಗುರಿಯೊಂದಿಗೆ ಬಿಜೆಪಿ ನಾಲ್ಕು ತಂಡಗಳಲ್ಲಿ ಪ್ರವಾಸ ಹಮ್ಮಿಕೊಂಡಿದೆ. ಈ ಪೈಕಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ 50 ವಿಧಾನಸಭಾ ಕ್ಷೇತ್ರಗಳಲ್ಲಿ ಹಾಗೂ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದ ತಂಡ 25 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಹಮ್ಮಿಕೊಂಡಿದೆ.