ಸುರತ್ಕಲ್ ಟೋಲ್ ಗೇಟ್ ಮುತ್ತಿಗೆ: ಪ್ರತಿಭಟನಾಕಾರರನ್ನು ವಶಕ್ಕೆ ಪಡೆದ ಪೊಲೀಸರು
ಸುರತ್ಕಲ್, ಅ.18: ಸುರತ್ಕಲ್ ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.
ಪೊಲೀಸ್ ಬ್ಯಾರಿಕೇಡ್ ಗಳನ್ನು ತಳ್ಳಿ ಟೋಲ್ ಗೇಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ತಡೆದರು. ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಮಾಜಿ ಶಾಸಕರಾದ ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಪ್ರಮುಖರಾದ ಮಿಥುನ್ ರೈ, ಶಶಿಧರ್ ಹೆಗ್ಡೆ, ಪ್ರತಿಭಾ ಕುಳಾಯಿ, ಬಿ.ಕೆ.ಇಮ್ತಿಯಾಝ್ ಸೇರಿದಂತೆ ಪ್ರತಿಭಟನಾಕಾರರನ್ನೆಲ್ಲ ಪೊಲೀಸರು ವಶಕ್ಕೆ ಪಡೆದು ಸ್ಥಳದಿಂದ ವಾಹನದಲ್ಲಿ ಕರೆದೊಯ್ದರು.
ಇದಕ್ಕೂ ಮೊದಲು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಇದೀಗ ಸುಗಮ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟರು.
ಪ್ರತಿಭಟನೆಯ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿತ್ತು.