ರಮೇಶ್ ಕುಮಾರ್ ರಿಗೆ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ: ಕುಮಾರಸ್ವಾಮಿ
ಮಾಜಿ ಸ್ಪೀಕರ್ ಬಗ್ಗೆ ಅವಾಚ್ಯ ಪದ ಬಳಕೆ: ಆರೋಪ
ಬೆಂಗಳೂರು, ನ.23: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ಅವಾಚ್ಯ ಪದ ಬಳಕೆ ನೋವುಂಟು ಮಾಡಿದೆ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ" ಎಂದು ತಿಳಿಸಿದ್ದಾರೆ.
"ನಿನ್ನೆಯ ದಿನ ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಬಂಗವಾದಿ ಗ್ರಾಮದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಶಾಲೆ ಕಂಡು ನನಗೆ ಬಹಳ ಬೇಸರವಾಗಿತ್ತು. ಮಕ್ಕಳು 2-3 ವರ್ಷದಿಂದ ಎದುರಿನ ಅಶ್ವತ್ಥಕಟ್ಟೆ ಮೇಲೆ ಪಾಠ ಕೇಳುತ್ತಿದ್ದರು ಎಂದು ಕೇಳಿ ನನ್ನಲ್ಲಿ ಆಕ್ರೋಶ ಉಂಟಾಗಿತ್ತು. ಈ ಆಕ್ರೋಶದ ಹಿನ್ನೆಲೆಯಲ್ಲಿ ಮಾತನಾಡುವ ಭರದಲ್ಲಿ ಹಾಗೆ ಮಾತನಾಡಿದ್ದೇನೆ ಹೊರತು, ಯಾರಿಗೂ ಅಪಮಾನ ಮಾಡುವುದಕ್ಕೆ ಅಲ್ಲ. ಮಕ್ಕಳ ಕಣ್ಣೀರು ನನ್ನ ಸಿಟ್ಟಿಗೆ ಕಾರಣವಾಯಿತು ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ" ಎಂದು ಹೇಳಿದ್ದಾರೆ.
ಹಿನ್ನೆಲೆ:
ಜೆಡಿಎಸ್ ಪಂಚರತ್ನ ರಥಯಾತ್ರೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದಲ್ಲಿ ಸಾಗುತ್ತಿದೆ. ಮಂಗಳವಾರ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಬಂಗವಾದಿ ಹಾಗೂ ಮಾಸ್ತೇನಹಳ್ಳಿ ಗ್ರಾಮಕ್ಕೆ ರಥಯಾತ್ರೆ ತಲುಪಿದಾಗ ಸ್ಥಳೀಯ ಸರಕಾರಿ ಶಾಲೆಯ ನೂರಾರು ಮಕ್ಕಳು ಪ್ರತಿಭಟನೆ ನಡೆಸಿದರು. ಈ ವೇಳೆ ಕುಮಾರಸ್ವಾಮಿ ಅವರ ಅಹವಾಲು ಆಲಿಸಿದರು. ಶಾಲಾ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಪಾಠ ಕೇಳಲು ಕಷ್ಟವಾಗುತ್ತಿದೆ ಎಂದು ಮಕ್ಕಳು ಅಳಲು ತೋಡಿಕೊಂಡರು. ಈ ಹಿನ್ನೆಲೆಯಲ್ಲಿ ಮಕ್ಕಳ ಜೊತೆಗೆ ತೆರಳಿ ಶಾಲಾ ಕಟ್ಟಡವನ್ನು ವೀಕ್ಷಿಸಿದ ಕುಮಾರಸ್ವಾಮಿ ದುರಸ್ತಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಅಲ್ಲಿಂದ ಹಿಂದಿರುಗಿ ಕಾರನ್ನೇರುತ್ತಿದ್ದಂತೆ ಅದರಲ್ಲಿದ್ದವರಲ್ಲಿ ಮಾತನಾಡುವ ವೇಳೆ ಶ್ರೀನಿವಾಸಪುರದ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಅವಾಚ್ಯ ಶಬ್ದ ಬಳಸಿ ಆಕ್ರೋಶ ವ್ಯಕ್ತಪಡಿಸಿದ್ದರೆನ್ನಲಾಗಿದೆ. ಇದರ ವೀಡಿಯೊ ವೈರಲ್ ಆಗಿತ್ತು.
ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡ ಕುಮಾರಸ್ವಾಮಿ, ಆ ಬಗ್ಗೆ ವಿಷಾದ ವ್ಯಕ್ತಪಡಿಸಿ, ಮಾತನ್ನು ಹಿಂಪಡೆದಿರುವುದಾಗಿ ಹೇಳಿದ್ದಾರೆ.
ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ನನ್ನ ವಿಷಾದವಿದೆ. ಆ ಮಾತನ್ನು ಹಿಂಪಡೆಯುತ್ತೇನೆ.1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 23, 2022