ಬಿಜೆಪಿ ಸರಕಾರದ ನಿರ್ಲಕ್ಷ್ಯದಿಂದ ಹಿಂದುಳಿದವರಿಗೆ ಅನ್ಯಾಯ: ಸಿದ್ದರಾಮಯ್ಯ
ಬೆಂಗಳೂರು, ಡಿ.17: ಹಿಂದುಳಿದ ಸಮುದಾಯಗಳ ರಾಜಕೀಯ ಮೀಸಲಾತಿ ಕಲ್ಪಿಸುವ ಬಗ್ಗೆ ಬಿಜೆಪಿ ಸರಕಾರದ ನಿರ್ಲಕ್ಷದಿಂದ ಆ ಸಮುದಾಯಕ್ಕೆ ಅನ್ಯಾಯವಾಗಿರುವುದು ಮಾತ್ರವಲ್ಲ, ಸ್ಥಳೀಯ ಸಂಸ್ಥೆ ಚುನಾವಣೆಯೂ ನಿಗದಿತ ಕಾಲಕ್ಕೆ ನಡೆಯದಂತಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಸಮುದಾಯ(ಒಬಿಸಿ)ಗಳ ರಾಜಕೀಯ ಮೀಸಲಾತಿಯನ್ನು ಅಂತಿಮಗೊಳಿಸಲು ರಾಜ್ಯ ಸರಕಾರ ವಿಳಂಬ ನೀತಿಯನ್ನು ಅನುಸರಿಸಿಕೊಂಡು ಬಂದಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಉದಾರವಾಗಿ ಮತ್ತೆ ಮಾ.31ರ ಗಡುವು ನೀಡಿದೆ ಎಂದು ತಿಳಿಸಿದ್ದಾರೆ.
ಸರಕಾರದ ನಡೆನುಡಿಗಳನ್ನು ಗಮನಿಸಿದರೆ ಒಬಿಸಿಗಳಿಗೆ ಮೀಸಲಾತಿ ಕಲ್ಪಿಸುವ ಉದ್ದೇಶವೆ ಇಲ್ಲ ಎನ್ನುವುದು ಸ್ಪಷ್ಟವಾಗುತ್ತದೆ. ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿಗಳಿಗೆ ಮೀಸಲಾತಿ ನೀಡುವಾಗ ಮೂರು ಹಂತದ ಪರಿಶೀಲನೆ ನಡೆಸಬೇಕು ಎಂದು ಕಳೆದ ಮೇ ತಿಂಗಳಲ್ಲಿಯೆ ಸುಪ್ರೀಂಕೋರ್ಟ್ ನೀಡಿದ್ದ ಆದೇಶವನ್ನು ರಾಜ್ಯ ಸರಕಾರ ಗಂಭೀರವಾಗಿ ಸ್ವೀಕರಿಸದೆ ಇದ್ದದ್ದೇ ಈಗಿನ ಬಿಕ್ಕಟ್ಟಿಗೆ ಕಾರಣ ಎಂದು ಸಿದ್ದರಾಮಯ್ಯ ದೂರಿದ್ದಾರೆ.
ವಿಶ್ವಾಸಾರ್ಹ ಅಂಕಿ ಅಂಶಗಳಿಂದ ಕೂಡಿದ ಮಾಹಿತಿಯನ್ನು ಆಧರಿಸಿ ಮೀಸಲಾತಿ ನೀತಿಯನ್ನು ರೂಪಿಸಬೇಕೆಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದ್ದರೂ ಸರಕಾರ ಅವಸರದಲ್ಲಿ ನಿವೃತ್ತ ನ್ಯಾ.ಎಂ.ಕೆ.ಭಕ್ತವತ್ಸಲ ಸಮಿತಿ ನೇಮಿಸಿ ಅμÉ್ಟೀ ಅವಸರದಲ್ಲಿ ಶಿಫಾರಸುಗಳನ್ನು ಪಡೆದು ಮೀಸಲಾತಿಯನ್ನು ರೂಪಿಸಿದೆ ಎಂದು ಅವರು ಟೀಕಿಸಿದ್ದಾರೆ.
ನ್ಯಾ,ಭಕ್ತವತ್ಸಲ ಸಮಿತಿ ಶಿಫಾರಸು ಆಧಾರಿತ ಮೀಸಲಾತಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರವೂ ತಪ್ಪನ್ನು ಸರಿಪಡಿಸಿಕೊಳ್ಳದೆ ಇದ್ದುದ್ದರಿಂದ ಸುಪ್ರೀಂಕೋರ್ಟ್ ಮತ್ತೆ ರಾಜ್ಯ ಸರಕಾರದ ವೈಫಲ್ಯವನ್ನು ತರಾಟೆಗೆ ತೆಗೆದುಕೊಂಡಿದೆ. ನಿಖರವಾದ ಅಂಕಿ-ಅಂಶಗಳು ಮತ್ತು ವಿಶ್ವಾಸಾರ್ಹ ಮಾಹಿತಿಯೊಡನೆ ವೈಜ್ಞಾನಿಕವಾಗಿ ನಡೆಸಿದ ಸಮೀಕ್ಷೆಯ ಆಧಾರದಲ್ಲಿ ಮೀಸಲಾತಿ ನೀತಿಯನ್ನು ರೂಪಿಸಬೇಕೆಂದು ಸುಪ್ರೀಂಕೋರ್ಟ್ ಹೇಳುತ್ತಲೇ ಬಂದಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ದೇಶದಲ್ಲಿಯೇ ಮೊದಲ ಬಾರಿಗೆ ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಅತ್ಯಂತ ವೈಜ್ಞಾನಿಕವಾಗಿ ನಡೆಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಸಿದ್ದವಾಗಿದೆ. ಇದರ ಆಧಾರದಲ್ಲಿಯೇ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿಯನ್ನು ರೂಪಿಸಿದರೆ ಸುಪ್ರೀಂಕೋರ್ಟ್ ಒಪ್ಪುವ ಸಾಧ್ಯತೆ ಇದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸೋಲಿನ ಭಯದಲ್ಲಿರುವ ರಾಜ್ಯ ಸರಕಾರಕ್ಕೆ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಎದುರಿಸುವ ಧೈರ್ಯವೂ ಇಲ್ಲ, ಹಿಂದುಳಿದ ಜಾತಿಗಳಿಗೆ ಮೀಸಲಾತಿಯನ್ನು ಕೊಡುವ ಮನಸ್ಸು ಇಲ್ಲ. ಸುಪ್ರೀಂಕೋರ್ಟ್ ನಿರೀಕ್ಷಿಸಿದ ರೀತಿಯಲ್ಲಿ ಮುಂದಿನ ಮೂರು ತಿಂಗಳೊಳಗೆ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಿ ವಿಶ್ವಾಸಾರ್ಹ ಅಂಕಿ ಅಂಶಗಳನ್ನು ಕಲೆ ಹಾಕಿ ಮೀಸಲಾತಿ ನೀತಿಯನ್ನು ರೂಪಿಸುವುದು ಅಸಾಧ್ಯವಾದ ಕೆಲಸ ಎಂದು ಅವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಕಾಂತರಾಜ್ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ರಾಜ್ಯ ಸರಕಾರ ಒಪ್ಪಿಕೊಂಡು ಅದರ ಆಧಾರದಲ್ಲಿಯೇ ಸ್ಥಳೀಯ ಸಂಸ್ಥೆಗಳಲ್ಲಿ ಒಬಿಸಿ ಮೀಸಲಾತಿ ನೀತಿಯನ್ನು ರೂಪಿಸಿ ಸುಪ್ರೀಂಕೋರ್ಟ್‍ಗೆ ಸಲ್ಲಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.