ಹಳೆಯ ವಾಹನಗಳನ್ನು ನಾಶಪಡಿಸುವ ನೀತಿಗೆ ಸಚಿವ ಸಂಪುಟ ಒಪ್ಪಿಗೆ?
ಬೆಳಗಾವಿ(ಸುವರ್ಣ ವಿಧಾನಸೌಧ), ಡಿ.22: ಕೇಂದ್ರದ ಮಾದರಿಯಲ್ಲಿ ರಾಜ್ಯದಲ್ಲಿಯೂ ನೋಂದಾಯಿತ ಹಳೆಯ ವಾಹನಗಳನ್ನು ನಾಶಪಡಿಸುವ ನೀತಿ-2022 ಜಾರಿಗೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಇದರ ಜೊತೆಗೆ, ‘ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ) ವಿಧೇಯಕ-2022ಕ್ಕೆ ಅನುಮೋದನೆ. ಬೆಂಗಳೂರು ನಗರ ವ್ಯಾಪ್ತಿಯ ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿಯಲ್ಲಿ 2020ರ ಆ.11ರಂದು ನಡೆದ ಅಹಿತಕರ ಘಟನೆಗಳ ಸಂಬಂಧ ಮ್ಯಾಜಿಸ್ಟೀರಿಯಲ್ ವಿಚಾರಣಾ ವರದಿಯ ಆಧಾರದಲ್ಲಿ ಮುಂದಿನ ಕಾನೂನು ಪ್ರಕ್ರಿಯೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.
ಕರ್ನಾಟಕ ಸ್ಟಾರ್ಟ್ ಅಪ್ ನೀತಿ 2022-27ಕ್ಕೆ ಅನುಮೋದನೆ. ಸರಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಪ್ಲಾಂಟೇಶನ್ ಬೆಳೆಗಳನ್ನು ಬೆಳೆಯುತ್ತಿರುವವರಿಗೆ ಅಂತಹ ಜಮೀನನ್ನು ಗುತ್ತಿಗೆ ಆಧಾರದ ಮೇಲೆ ನೀಡುವ ಕುರಿತಾದ ‘ಕರ್ನಾಟಕ ಭೂ ಕಂದಾಯ(3ನೆ ತಿದ್ದುಪಡಿ)ವಿಧೇಯಕ,2022ಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎನ್ನಲಾಗಿದೆ.
2022-23ನೆ ಸಾಲಿಗೆ ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ 100 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪೀಠೋಪಕರಣಗಳನ್ನು ಒದಗಿಸಲು ನಿರ್ಧರಿಸಲಾಗಿದೆ.ಕೆಎಸ್ಸಾರ್ಟಿಸಿಯ ಬಂಡವಾಳ ವೆಚ್ಚಗಳಡಿಯಲ್ಲಿ ಕೈಗೊಳ್ಳಲಾಗುತ್ತಿರುವ 3 ಕಾಮಗಾರಿಗಳಿಗೆ(ಉಡುಪಿ ಗ್ರಾಮಾಂತರ ಬಸ್ ನಿಲ್ದಾಣ-31.34 ಕೋಟಿ ರೂ., ಕನಕಪುರ ತಾಲೂಕು ಕೇಂದ್ರ ಬಸ್ ನಿಲ್ದಾಣ-29.58 ಕೋಟಿ ರೂ., ನೆಲಮಂಗಲ ಬಸ್ ನಿಲ್ದಾಣ-47.54 ಕೋಟಿ ರೂ.)ಘಟನೋತ್ತರ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಹೇಳಲಾಗಿದೆ.
2022-23ನೆ ಸಾಲಿನಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ 620 ವಿವಿಧ ಮಾದರಿಯ ಹೊಸ ಬಿ.ಎಸ್-6 ಬಸ್ಸುಗಳನ್ನು 269.75 ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಬೆಂಗಳೂರು ಮೆಟ್ರೊ ರೈಲು ಯೋಜನೆಯ ಹಂತ-1ರ ಪರಿಷ್ಕøತ ಯೋಜನಾ ವೆಚ್ಚ 14,133.17 ಕೋಟಿ ರೂ.ಗಳಿಗೆ ಹಾಗೂ ಪರಿಷ್ಕøತ ಹಣಕಾಸು ಮಾದರಿಗೆ ಅನುಮೋದನೆ. ವಿಶ್ವಬ್ಯಾಂಕ್ ನೆರವಿನೊಂದಿಗೆ ‘ಕರ್ನಾಟಕ ನಗರ ನೀರು ಸರಬರಾಜು ಆಧುನೀಕರಣ ಯೋಜನೆಯ ಅನುಷ್ಠಾನದ 3740 ಕೋಟಿ ರೂ.ಗಳ ಪರಿಷ್ಕøತ ಯೋಜನಾ ವೆಚ್ಚಕ್ಕೆ ಅನುಮೊದನೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ 5701.38 ಕೋಟಿ ರೂ.ವೆಚ್ಚದ ಒಟ್ಟು 13 ಅತ್ಯಂತ ಪ್ರಮುಖ ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ. ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ 3ರಡಿ ಭೂ ಸ್ವಾಧೀನಕ್ಕೆ ಒಳಪಡುವ ಜಮೀನುಗಳಿಗೆ ಏಕರೂಪದ ಬೆಲೆ ನಿಗದಿಪಡಿಸಿ ಐತೀರ್ಪನ್ನು ರಚಿಸುವ ಮೂಲಕ ಪರಿಹಾರ ವಿತರಿಸಲು ನಿರ್ಣಯ ಕೈಗೊಳ್ಳಲಾಗಿದೆ.
‘ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಅಡಿಯಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಇಂದು ಮಧ್ಯಂತರ ವರದಿ ಸಲ್ಲಿಸಿದ್ದು, ಈ ಬಗ್ಗೆ ಸಂಪುಟದಲ್ಲಿ ಚರ್ಚೆ ನಡೆಸಲಾಯಿತು.ಅಲ್ಲದೆ, ಆಯೋಗದಿಂದ ಪೂರ್ಣ ಪ್ರಮಾಣದ ವರದಿಯನ್ನು ಆದಷ್ಟು ಬೇಗ ತರಿಸಿಕೊಂಡು ಕಾನೂನಾತ್ಮಕ ಅಂಶಗಳ ಬಗ್ಗೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು ಎಂದು ತಿಳಿದು ಬಂದಿದೆ.
ಪ್ರಧಾನಿ ಕಾರ್ಯಕ್ರಮದ ಯಶಸ್ಸಿಗೆ ಚರ್ಚೆ: ‘ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12 ರಿಂದ 16ರವರೆಗೂ ನಡೆಯಲಿರುವ ರಾಷ್ಟ್ರಮಟ್ಟದ ಯುವ ಜನೋತ್ಸವವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ಈ ಕಾರ್ಯಕ್ರಮ ಯಶಸ್ವಿಗೊಳಿಸುವ ಸಂಬಂಧವೂ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ ಎಂದು ಹೇಳಲಾಗಿದೆ.