ಕೋಲಾರದಲ್ಲೇ ಸ್ಪರ್ಧೆ ಮಾಡುವಂತೆ ಒತ್ತಾಯ: ಸಿದ್ದರಾಮಯ್ಯ ನಿವಾಸದ ಮುಂದೆ ಅಭಿಮಾನಿಗಳ ಧರಣಿ
ಬೆಂಗಳೂರು: ಕೋಲಾರ ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವಂತೆ ಆಗ್ರಹಿಸಿ ಸಿದ್ದರಾಮಯ್ಯ ಅವರ ಅಭಿಮಾನಿಗಳು ಹಾಗೂ ಪಕ್ಷದ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸದ ಮುಂದೆ ಧರಣಿ ನಡೆಸುತ್ತಿದ್ದಾರೆ.
ಇಂದು (ಮಂಗಳವಾರ) ಬೆಳಗ್ಗೆ ನಗರದ ಶಿವಾನಂದ ಸರ್ಕಲ್ ಬಳಿ ಇರುವ ಸಿದ್ದರಾಮಯ್ಯ ಸರ್ಕಾರಿ ನಿವಾಸಕ್ಕೆ ಸಾಕಷ್ಟು ಸಂಖ್ಯೆಯಲ್ಲಿ ಸೇರಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಿದ್ದರಾಮಯ್ಯ ಅಭಿಮಾನಿಗಳು ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧೆ ನಡೆಸುವಂತೆ ಆಗ್ರಹಿಸುತ್ತಿದ್ದಾರೆ.
ಬೆಳ್ಳಂಬೆಳಗ್ಗೆ ಹತ್ತಾರು ವಾಹನಗಳಲ್ಲಿ ಕೋಲಾರದಿಂದ ಆಗಮಿಸಿರುವ ಸಿದ್ದರಾಮಯ್ಯ ಅವರ ಅಭಿಮಾನಿಗಳು, 'ಕೋಲಾರ ನಮ್ಮೂರು ಸಿದ್ದರಾಮಯ್ಯ ನಮ್ಮವರು' ಎಂಬಿತ್ಯಾದಿ ಭಿತ್ತಿ ಪತ್ರಗಳನ್ನು ಇಟ್ಟುಕೊಂಡು ಘೋಷಣೆ ಕೂಗುತ್ತಿದ್ದಾರೆ.
ಸಿದ್ದರಾಮಯ್ಯ ಅವರು ಕೋಲಾರದಿಂದಲೇ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದರು. ಅಲ್ಲದೇ, ಅಲ್ಲಿ ಪ್ರಚಾರ ಕಾರ್ಯಗಳನ್ನೂ ಆರಂಭಿಸಿದ್ದರು. ಆದರೆ ಹೈಕಮಾಂಡ್ ಸೂಚನೆಯಂತೆ ಅವರು ಕೋಲಾರದಿಂದ ಸ್ಪರ್ಧೆ ಮಾಡುವುದರಿಂದ ಹಿಂದೆ ಸರಿದಿದ್ದಾರೆ ಎಂಬ ವದಂತಿ ಹಿನ್ನೆಲೆ ಕೋಲಾರದ ಕಾಂಗ್ರೆಸ್ ಕಾರ್ಯಕರ್ತರು ಸಿದ್ದರಾಮಯ್ಯ ಮನೆಯ ಮುಂದೆ ಜಮಾಯಿಸಿ ಕೋಲಾರದಿಂದಲೇ ಸ್ಪರ್ಧಿಸುವಂತೆ ಪಟ್ಟು ಹಿಡಿದಿದ್ದಾರೆ.