ಮಹಾರಾಷ್ಟ್ರ: ಶೌಚ ಗುಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಐವರು ಕಾರ್ಮಿಕರು ಸಾವು
ಮುಂಬೈ, ಮೇ 13: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಶೌಚ ಗುಂಡಿ ಸ್ವಚ್ಛಗೊಳಿಸುತ್ತಿದ್ದ ಸಂದರ್ಭ ವಿಷಾನಿಲ ಸೇವಿಸಿ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋನ್ಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಬಾವೂಚ್ ತಾಂಡಾ ಪ್ರದೇಶದಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಈ ಪ್ರದೇಶದ ತೋಟದಲ್ಲಿರುವ ಶೌಚ ಗುಂಡಿಗೆ ಆರು ಮಂದಿ ಕಾರ್ಮಿಕರು ಗುರುವಾರ ಅಪರಾಹ್ನ ಇಳಿದಿದ್ದರು. ಈ ಸಂದರ್ಭ ಅವರಿಗೆ ಉಸಿರಾಡಲು ಕಷ್ಟವಾಯಿತು. ಇದರಿಂದ ಅಸ್ವಸ್ಥಗೊಂಡರು. ಕೂಡಲೇ ಅವರನ್ನು ಜಿಲ್ಲೆಯ ಆಸ್ಪತ್ರೆಗೆ ಕರೆ ತರಲಾಯಿತು. ಆದರೆ, ಐವರು ಸಾವನ್ನಪ್ಪಿದರು. ಇನ್ನೋರ್ವನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋನ್ಪೇಟ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಗೆ ಸಂತಾಪ ಸೂಚಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ, ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.