ವಿಧಾನಸಭೆಗೆ ಮೊದಲ ಬಾರಿಗೆ ಆಯ್ಕೆಯಾದ 50ಕ್ಕೂ ಹೆಚ್ಚು ಮಂದಿ ಹೊಸಬರು
ಬೆಂಗಳೂರು, ಮೇ 13: ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಪಕ್ಷದಿಂದ 35 ಮಂದಿ, ಬಿಜೆಪಿಯ 19 ಮಂದಿ ಸೇರಿದಂತೆ ಮೊದಲ ಬಾರಿಗೆ 50ಕ್ಕೂ ಮಂದಿ ಹೊಸಬರು ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ, ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ. ಅದೇ ರೀತಿ, ಹಾಸನ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕ ಪ್ರೀತಮ್ ಗೌಡರನ್ನು ಸೋಲಿಸಿ ಜೆಡಿಎಸ್ ಅಭ್ಯರ್ಥಿ ಸ್ಪರೂಪ್ ಪ್ರಕಾಶ್ ಗೆಲುವು ಕಂಡಿದ್ದಾರೆ.
ಮೇಲುಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ದರ್ಶನ್ ಪುಟ್ಟಣ್ಣಯ್ಯ ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ವಿರುದ್ಧ ಜಯಗಳಿಸಿದ್ದಾರೆ. ಚಿತ್ರದುರ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕೆ.ಸಿ.ವಿರೇಂದ್ರ ಪಪ್ಪಿ, ಬಿಜೆಪಿ ಅಭ್ಯರ್ಥಿ ಜಿ.ಎಚ್.ತಿಪ್ಪಾರೆಡ್ಡಿ ವಿರುದ್ಧ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಗಂಗಾವತಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕರ್ನಾಟಕ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(ಕೆಕೆಆರ್‍ಪಿಪಿ)ದ ಅಭ್ಯರ್ಥಿ ಗಾಲಿ ಜನಾರ್ದನರೆಡ್ಡಿ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ. ಬಳ್ಳಾರಿ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಾರಾ ಭರತ್‍ರೆಡ್ಡಿ, ಜನಾರ್ದನರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿ ವಿಧಾನಸಭೆ ಪ್ರವೇಶಿಸಿದ್ದಾರೆ.
ಕೊಡಗು ಕೈವಶ: ಕೊಡಗು ಜಿಲ್ಲೆಯ ವಿರಾಜಪೇಟೆ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್, ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯರನ್ನು ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಪರಾಭವಗೊಳಿಸಿದರೆ, ಮಡಿಕೇರಿ ಕ್ಷೇತ್ರದಲ್ಲಿ ಹಾಲಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್ ಗೌಡ ಗೆಲುವು ಸಾಧಿಸುವ ಮೂಲಕ ಮೊದಲ ಬಾರಿಗೆ ಇವರಿಬ್ಬರು ವಿಧಾನಸಭೆ ಪ್ರವೇಶ ಮಾಡಲಿದ್ದಾರೆ.
ರಾಮನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ಮಣಿಸುವ ಮೂಲಕ ಎಚ್.ಎ.ಇಕ್ಬಾಲ್ ಹುಸೇನ್ ಮೊದಲ ಬಾರಿಗೆ ಗೆಲುವು ದಾಖಲಿಸಿದ್ದಾರೆ. ಮದ್ದೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕದಲೂರು ಉದಯ್, ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪಿ.ರವಿಕುಮಾರ್ ಗಣಿಗಾ, ಮಹದೇವಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಂಜುಳಾ ಅರವಿಂದ ಲಿಂಬಾವಳಿ ಗೆಲುವು ದಾಖಲಿಸಿದ್ದಾರೆ.
ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜು, ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್‍ಕುಮಾರ್ ರೈ, ಮೂಡಿಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ ಮೊದಲ ಬಾರಿಗೆ ಪ್ರವೇಶಿಸಿದ್ದಾರೆ. ಪುಲಿಕೇಶಿನಗರದಲ್ಲಿ ಕಾಂಗ್ರೆಸ್‍ನ ಎ.ಸಿ.ಶ್ರೀನಿವಾಸ್, ದೇವನಹಳ್ಳಿಯಲ್ಲಿ ಕಾಂಗ್ರೆಸ್‍ನ ಕೆ.ಎಚ್.ಮುನಿಯಪ್ಪ ಗೆಲುವು ಸಾಧಿಸಿದ್ದಾರೆ.