ಲಿಂಗಾಯತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಸಿದ್ದರಾಮಯ್ಯ ವಿರುದ್ಧದ ಪ್ರಕರಣ ರದ್ದುಗೊಳಿಸಿದ ನ್ಯಾಯಾಲಯ
ಬೆಂಗಳೂರು, ಜೂ.14: ವಿಧಾನಸಭಾ ಚುನಾವಣೆಯ ಸಮಯದಲ್ಲಿ ಲಿಂಗಾಯತ ಮುಖ್ಯಮಂತ್ರಿಗಳು ಭ್ರಷ್ಟರು ಎಂಬುದಾಗಿ ಅರ್ಥೈಸುವಂತೆ ವಿರೋಧ ಪಕ್ಷದ ನಾಯಕರಾಗಿದ್ದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ರದ್ದುಗೊಳಿಸಿದೆ.
ಈ ಸಂಬಂಧ ಶಂಕರ್ ಶೇಠ್ ಮತ್ತು ಮಲ್ಲಯ್ಯ ಹಿರೇಮಠ ಎಂಬುವರು ದಾಖಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ನ್ಯಾಯಾಲಯವು ಈ ಆದೇಶ ನೀಡಿದೆ.
ಪ್ರಕರಣದಲ್ಲಿ ಪ್ರತಿವಾದಿಯವರ ಹೇಳಿಕೆ ಇಡೀ ಲಿಂಗಾಯತ ಸಮುದಾಯದ ಸದಸ್ಯರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿಲ್ಲ. ಅಥವಾ ಇಡೀ ಲಿಂಗಾಯತ ಸಮಾಜವನ್ನು ಉದ್ದೇಶಿಸಿ ಹೇಳಿಕೆ ನೀಡಿಲ್ಲ. ಜತೆಗೆ, ಅವರು ನೀಡಿರುವ ಪ್ರತಿಕ್ರಿಯೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದವರಿಗೆ ಮಾತ್ರ ಸಂಬಂಧಿಸಿದಂತಿದೆ ಎಂದು ನ್ಯಾಯಪೀಠವು ಆದೇಶದಲ್ಲಿ ತಿಳಿಸಿದೆ.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಲಿಂಗಾಯತರಿಗೆ ಸಿಎಂ ಸ್ಥಾನ ನೀಡುತ್ತೀರಾ ಎಂದು 2023ರ ಚುನಾವಣಾ ಪ್ರಚಾರದ ವೇಳೆ ಸಿದ್ದರಾಮಯ್ಯ ಅವರನ್ನು ಪತ್ರಕರ್ತರು ಪ್ರಶ್ನೆ ಮಾಡಿದ್ದರು. ಅದಕ್ಕೆ ಉತ್ತರಿಸಿದ್ದ ಅವರು, ಈಗ ಲಿಂಗಾಯತ ಮುಖ್ಯಮಂತ್ರಿಗಳೆ ಇದ್ದಾರಲ್ಲ. ಅವರೇ ಭ್ರಷ್ಟಾಚಾರ ನಡೆಸಿ ರಾಜ್ಯವನ್ನು ಹಾಳು ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಹೇಳಿಕೆಯಿಂದ ಸಮುದಾಯದ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಆಕ್ಷೇಪಿಸಿ ಫಿರ್ಯಾದುದಾರರು ಖಾಸಗಿ ದೂರು ದಾಖಲಿಸಿದ್ದರು.