ಅಕ್ಕಿ ಪೂರೈಕೆ ವಿಚಾರದಲ್ಲಿ ಕೇಂದ್ರದಿಂದ ಕೀಳುಮಟ್ಟದ ರಾಜಕಾರಣ: ಸಿಎಂ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು, ಜೂ.21: ಅನ್ನಭಾಗ್ಯ ಯೋಜನೆಯಡಿ ರಾಜ್ಯಕ್ಕೆ ಅಗತ್ಯವಿರುವ ಅಕ್ಕಿ ನೀಡುವುದಾಗಿ ಮೊದಲು ಒಪ್ಪಿಕೊಂಡು, ನಂತರ ನಿರಾಕರಿಸುವ ಮೂಲಕ ಕೇಂದ್ರ ಸರಕಾರವು ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ಹೊಸದಿಲ್ಲಿಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆ ಈಡೇರಿಸಲು ರಾಜ್ಯಕ್ಕೆ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್ಸಿಐಗೆ ಜೂ.9ರಂದು ಪತ್ರ ಬರೆಯಲಾಗಿತ್ತು. ಎಫ್ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೆ ತೊಂದರೆಯಿಲ್ಲ ಎಂದು ಜೂ.12 ರಂದು ಪತ್ರಮುಖೇನ ತಿಳಿಸಿದ್ದರು ಎಂದು ಅವರು ಹೇಳಿದರು.
ಎಫ್ಸಿಐನ ಡೆಪ್ಯೂಟಿ ಮ್ಯಾನೇಜರ್ ಅವರನ್ನು ಭೇಟಿಯಾಗಿ ಈ ಬಗ್ಗೆ ಖಚಿತಪಡಿಸಿಕೊಳ್ಳಲಾಗಿತ್ತು. ಆದರೆ ಜೂ.13ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ಸಿಐಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಿದ್ದಾರೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.
ಜೂ.14 ರಂದು ಎಫ್ಸಿಐನ ಅಧ್ಯಕ್ಷರು ಪತ್ರ ಬರೆದು, ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು, ಭಾರತ ಸರಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಅನ್ನ ಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯಲು ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆಟ್ರಿಕ್ ಟನ್ ನೀಡಲು ಸಾಧ್ಯವಿಲ್ಲವೆಂದು ತಿಳಿಸಿದ್ದಾರೆ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ ಎಂದು ಅವರು ಹೇಳಿದರು.
ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸ್ಗಡದ ಮುಖ್ಯಮಂತ್ರಿ ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದರು.
ರಾಜ್ಯಗಳಿಗೆ ಅಕ್ಕಿ ನೀಡುವುದನ್ನು ಸ್ಥಗಿತಗೊಳಿಸಿರುವ ಬಗ್ಗೆ ನೀತಿ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ಅಂತರ ಸಚಿವಾಲಯಗಳ ಸಭೆ ನಡೆದಿದೆ ಹಾಗೂ ಮಾಹಿತಿಯ ಕೊರತೆಯಿಂದ ಪತ್ರ ಬರೆದಿದ್ದಾಗಿ ಕೇಂದ್ರ ಸರಕಾರ ಹೇಳಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಎಫ್ಸಿಐ ಕೇಂದ್ರ ಸರಕಾರದ ಸ್ವಾಮ್ಯ ಸಂಸ್ಥೆಯಾಗಿದ್ದು, ಅಕ್ಕಿ ನೀಡುವುದಾಗಿ ಒಪ್ಪಿ ಪತ್ರ ಬರೆದಿದ್ದಾರೆ ಎಂದರು.