ತಪ್ಪು ಮಾಡಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿರುವ ಕಾಂಗ್ರೆಸ್: ಎಚ್.ಡಿ.ಕುಮಾರಸ್ವಾಮಿ
''ಕೇಂದ್ರ ಸರಕಾರ ನಿಮಗೆ ಏಕೆ ಅಕ್ಕಿ ಕೊಡಬೇಕು?''
ಬೆಂಗಳೂರು, ಜೂ. 21: ‘ಪಡಿತರ ಚೀಟಿದಾರರಿಗೆ ಅಕ್ಕಿ ನೀಡುವ ವಿಚಾರದ ಬಗ್ಗೆ ದಿನಕ್ಕೊಂದು ನೆಪ ಹೇಳುತ್ತಿರುವ ಕಾಂಗ್ರೆಸ್ ಸರಕಾರ ತಾನು ಎಸಗಿದ ಸ್ವಯಂಕೃತ ತಪ್ಪಿಗೆ ಕೇಂದ್ರ ಸರಕಾರ ಮೇಲೆ ಗೂಬೆ ಕೂರಿಸುತ್ತಾ ಜನರನ್ನು ವಂಚಿಸುತ್ತಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಧವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಚುನಾವಣಾ ತಂತ್ರಗಾರರ ಮಾತು ಕೇಳಿಕೊಂಡು ಗ್ಯಾರಂಟಿ ಘೋಷಣೆ ಮಾಡಿದಾಗ, ಯೋಜನೆ ಜಾರಿಗೆ ಸಿದ್ಧತೆ ಮಾಡಿಕೊಳ್ಳಬೇಕಿತ್ತು. ಅಕ್ಕಿ ಗ್ಯಾರಂಟಿ ಬಗ್ಗೆ ಇವರೇನು ಕೇಂದ್ರ ಸರಕಾರಕ್ಕೆ ಅರ್ಜಿ ಹಾಕಿದ್ದರೇ? ಪೊಳ್ಳು ಭರವಸೆ ಕೊಟ್ಟು ಗ್ಯಾರಂಟಿ ಎಂದು ಇನ್ನೊಬ್ಬರ ಮೇಲೆ ಗೂಬೆ ಕೂರಿಸುವುದು ಎಷ್ಟು ಸರಿ. ಸರಿ ತಪ್ಪು ಎನ್ನುವುದನ್ನು ನಾವು ಮಾಡಬೇಕಲ್ಲವೇ? ಎಂದು ಪ್ರಶ್ನಿಸಿದರು.
‘ಕೇಂದ್ರ ಸರಕಾರ ನಿಮಗೆ ಏಕೆ ಅಕ್ಕಿ ಕೊಡಬೇಕು? ಅರ್ಜಿ ಹಾಕಿದ್ದರೆ ನೀವು? ಯಾವನೋ ಬಂದು ಚುನಾವಣಾ ತಂತ್ರಗಾರ ಸಲಹೆ ಕೊಟ್ಟ ಎಂದು ನೀವು ಉಚಿತ ಎಂದಿದ್ದೀರಿ. ಸಚಿವರ ಹೆಂಡತಿಗೂ ಫ್ರೀ, ನನ್ನ ಹೆಂಡತಿಗೂ ಫ್ರೀ ಎಂದು ಹೇಳಿ ಎಲ್ಲರೂ ಅರ್ಜಿ ಹಾಕಿಕೊಳ್ಳಬಹುದು ಎಂದಿದ್ದೀರೀ. ಈಗ ನೋಡಿದರೆ ಬೇರೆ ವರಸೆ ಶುರು ಮಾಡಿಕೊಂಡಿದ್ದೀರಿ ಎಂದು ಟೀಕಿಸಿದರು.
ಎರಡು ರಾಷ್ಟ್ರೀಯ ಪಕ್ಷಗಳ ಇಂದಿನ ನಡವಳಿಕೆ ನೋಡಿದಾಗ ಬೇಸರವಾಗುತ್ತಿದೆ. ರಾಜ್ಯದ ಜನತೆ ಅವರನ್ನು ನಂಬಿ ಮತ ಕೊಟ್ಟಿದ್ದಾರೆ. ಜನತೆ ಎರಡು ಪಕ್ಷಗಳ ನಾಟಕ ನೋಡಬೇಕಾಗಿದೆ. ಇವರು ಯಾವ ರೀತಿ ಟೋಪಿ ಹಾಕ್ತಾರೆ ಅಂತ ನೋಡುವ ಅನಿವಾರ್ಯತೆ ಜನರೇ ಸೃಷ್ಟಿ ಮಾಡಿಕೊಂಡಿದ್ದಾರೆ ಎಂದು ಅವರು ವಾಗ್ದಾಳಿ ನಡೆಸಿದರು.
ಜಾರಕಿಹೊಳಿ ಹೇಳಿಕೆ ಸರಿಯಲ್ಲ: ‘ಕೇಂದ್ರ ಸರಕಾರ ಸರ್ವರ್ ಹ್ಯಾಕ್ ಮಾಡಿದ್ದ ಪರಿಣಾಮ ‘ಗೃಹಲಕ್ಷ್ಮಿ’ ಜಾರಿ ಮಾಡಲಾಗುತ್ತಿಲ್ಲ ಎಂದಿರುವ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಬಾಯಿ ಚಪಲಕ್ಕೆ ಮಾತನಾಡ್ತಿದ್ದಾರೆ ಅವರು. ಯಾಕೆ ಹ್ಯಾಕ್ ಮಾಡುತ್ತಾರೆ, ನಿಮ್ಮ ಸರ್ವರ್ ಬಲಪಡಿಸಿಕೊಳ್ಳೋದು ನಿಮ್ಮ ಜವಾಬ್ದಾರಿ ಎಂದು ಸಲಹೆ ನೀಡಿದರು.
ಮೊಟ್ಟೆ, ಬಾಳೆಹಣ್ಣು ಕಡಿತ ಸಲ್ಲ: ಶಾಲಾ ಮಕ್ಕಳಿಗೆ ಒಂದು ಮೊಟ್ಟೆ, ಒಂದು ಬಾಳೆಹಣ್ಣು ಎಂದು ಹೇಳಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಅದು ಇರಲ್ವೇನೊ? ಇವರಿಗೆ ಮಕ್ಕಳ ಆಹಾರದಲ್ಲಿ ಹಣದ ಹಪಾಹಪಿ ಶುರುವಾಗಿದೆ ಎಂದು ಅವರು, ಸಿಎಂ ಅಧಿಕಾರ ಹಂಚಿಕೆ ಅವರಿಗೆ ಸೇರಿದ ವಿಚಾರ. 5 ವರ್ಷ ಅವರೇ ಇರುತ್ತಾರೋ, ಇನ್ಯಾರಾದರೂ ಬರುತ್ತಾರೋ ನನಗೆ ಗೊತ್ತಿಲ್ಲ’ ಎಂದು ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದರು.