ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ ವೇತನ ಸಹಿತ ರಜೆ ಘೋಷಣೆ
ಬೆಂಗಳೂರು : ರಾಜ್ಯ ಚುನಾವಣಾ ಆಯೋಗವು ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆಯನ್ನು ನಡೆಸಲು ಆದೇಶಿಸಿದೆ. ಸದರಿ ಚುನಾವಣಾ ವೇಳಾ ಪಟ್ಟಿಯಂತೆ, ನ.23ರ ಶನಿವಾರದಂದು ಮತದಾನ ನಡೆಯಲಿದೆ.
ಮತದಾರರಿಗೆ ಮತದಾನ ಮಾಡಲು ಅವಕಾಶವಾಗುವಂತೆ, ಉಪ-ಚುನಾವಣೆ ನಡೆಯುವ ಆಯಾ ನಗರ ಸ್ಥಳೀಯ ಸಂಸ್ಥೆಯ ಆಯಾ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲ ಕಚೇರಿಗಳು, ಶಾಲಾ ಕಾಲೇಜುಗಳು (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಮತ್ತು ಸರಕಾರಿ ಸ್ವಾಮ್ಯದ ಸಂಸ್ಥೆಗಳು ಒಳಗೊಂಡಂತೆ ನ.23ರಂದು ಸಾರ್ವತ್ರಿಕ ರಜೆಯನ್ನು ಘೋಷಿಸಿದೆ.
ಈ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಎಲ್ಲ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪೆನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಲು ಈ ಮೂಲಕ ಆದೇಶಿಸಿದೆ.
ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ. ಆದಾಗ್ಯೂ ತುರ್ತು ಸೇವೆಯಡಿ ಕೆಲಸ ಮಾಡುವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡತಕ್ಕದ್ದು. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲ ನೌಕರರುಗಳು ಚುನಾವಣಾ ಕಾರ್ಯಕ್ಕೆ ಹಾಜರಾಗತಕ್ಕದ್ದು. ಸದರಿ ಆದೇಶವು ನೆಗೋಷಿಯೇಬಲ್ ಇನ್ಟ್ರೂಮೆಂಟ್ ಆಕ್ಟ್ 1881ರ ಪ್ರಕಾರವೂ ಸಾರ್ವಜನಿಕ ರಜೆಯೆಂದು ಘೋಷಿಸಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಅಧೀನ ಕಾರ್ಯದರ್ಶಿ ತಿಳಿಸಿದ್ದಾರೆ.