ಬೆಂಗಳೂರು | ಹಾಸ್ಟೆಲ್ನಲ್ಲಿ ಇಲಿ ಪಾಷಾಣ ಸಿಂಪಡಣೆ : ವಿದ್ಯಾರ್ಥಿಗಳು ಅಸ್ವಸ್ಥ
ಸಾಂದರ್ಭಿಕ ಚಿತ್ರ
ಬೆಂಗಳೂರು : ಹಾಸ್ಟೆಲ್ನಲ್ಲಿ ವಿದ್ಯಾರ್ಥಿಗಳು ಊಟ ಸೇವಿಸುತ್ತಿದ್ದ ವೇಳೆ ಇಲಿ ಪಾಷಾಣ ಸಿಂಪಡಣೆಯಿಂದಾಗಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ರವಿವಾರ ರಾತ್ರಿ ವಿದ್ಯಾರ್ಥಿಗಳು ಊಟ ಮಾಡಲು ಹಾಸ್ಟೆಲ್ ಹಾಲ್ಗೆ ಬಂದಿದ್ದರು. ಇದೇ ವೇಳೆ ವಿದ್ಯಾರ್ಥಿಗಳು ಊಟ ಮಾಡುತ್ತಿದ್ದಾಗ ಹಾಸ್ಟೆಲ್ ಸಿಬ್ಬಂದಿ ಇಲಿ ಪಾಷಾಣ ಸಿಂಪಡಣೆ ಮಾಡುತ್ತಿದ್ದರು ಎನ್ನಲಾಗಿದೆ. ಇಲಿ ಪಾಷಾಣದ ವಾಸನೆಯಿಂದಾಗಿ ನರ್ಸಿಂಗ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
20ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ ಎನ್ನಲಾಗುತ್ತಿದ್ದು, ಅವರನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗಳಿಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಸ್ಟೆಲ್ ಸಿಬ್ಬಂದಿಯ ಎಡವಟ್ಟಿನಿಂದ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಜ್ಞಾನಭಾರತಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ ತಿಳಿದು ಬಂದಿದೆ.