ಅ.24, 25ಕ್ಕೆ ಉಪ ಲೋಕಾಯುಕ್ತರ ಬೆಂಗಳೂರು ನಗರ ಜಿಲ್ಲಾ ಪ್ರವಾಸ
ಬೆಂಗಳೂರು: ಉಪ ಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ ಅವರು ಅ.24 ಹಾಗೂ 25ರಂದು ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಯಲಹಂಕ ಉಪ ನಗರದಲ್ಲಿರುವ ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಸಾರ್ವಜನಿಕ ಕುಂದು-ಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಉಪಲೋಕಾಯುಕ್ತರು ಅಂದು ಬೆಂಗಳೂರು ನಗರ ಜಿಲ್ಲೆಯ ಯಲಹಂಕ ಮತ್ತು ಬೆಂಗಳೂರು ಪೂರ್ವ ತಾಲೂಕುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರ ಕುಂದು-ಕೊರತೆ, ದೂರು ವಿಚಾರಣೆ ಹಾಗೂ ವಿವಿಧ ಪ್ರಕರಣಗಳ ವಿಲೇವಾರಿಗೆ ಸಂಬಂಧಿಸಿದಂತೆ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಅ. 24ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1:30ರ ವರೆಗೆ ಹಾಗೂ ಮಧ್ಯಾಹ್ನ 2:30ರಿಂದ ಸಂಜೆ 5ರ ವರೆಗೆ ಅಹವಾಲುಗಳನ್ನು ಸ್ವೀಕರಿಸುವ ಉಪಲೋಕಾಯುಕ್ತರು, ಸಂಜೆ 5:30 ರಿಂದ 6:30ರ ವರೆಗೆ ಅದೇ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದೊಂದಿಗೆ ನಡೆಯಲಿರುವ ‘ಕರ್ನಾಟಕ ಲೋಕಾಯುಕ್ತ ಕಾಯ್ದೆ' ಕುರಿತ ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಶಿಕ್ಷಣ, ರೇಷ್ಮೆ, ಕೃಷಿ, ತೋಟಗಾರಿಕೆ, ಸಾರಿಗೆ, ಸಮಾಜ ಕಲ್ಯಾಣ, ಉಪ ನೋಂದಣಾಧಿಕಾರಿಗಳು, ನ್ಯಾಯಾಂಗ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಗೂ ಇತರೆ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದಾರೆ. ಅ.25ರ ಬೆಳಗ್ಗೆ 10 ಗಂಟೆಗೆ ಹಿಂದಿನ ದಿನದ ಕುಂದು-ಕೊರತೆಗಳಲ್ಲಿ ಬಾಕಿ ಉಳಿದಂತಹ ಅಹವಾಲುಗಳ ಬಗ್ಗೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚಿಸಲಿದ್ದಾರೆ ಎಂದು ತಿಳಿಸಲಾಗಿದೆ.
ಬೆಳಗ್ಗೆ 10:30ರಿಂದ ಮಧ್ಯಾಹ್ನ 1:30ರ ವರೆಗೆ ಹಾಗೂ ಮಧ್ಯಾಹ್ನ 2:30ರಿಂದ ಸಂಜೆ 5ಗಂಟೆಯ ವರೆಗೆ ಸಾರ್ವಜನಿಕ ಅವಾಲುಗಳ ಬಾಕಿ ಪ್ರಕರಣಗಳ ಬಗ್ಗೆ ಚರ್ಚಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಎರಡೂ ದಿನಗಳ ಅಹವಾಲು ಸ್ವೀಕಾರ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ್ ಪ್ರಕಟಣೆಯಲ್ಲಿ ಕೋರಿದ್ದಾರೆ.