ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ | ನಿರೀಕ್ಷಣಾ ಜಾಮೀನು ಷರತ್ತು ಸಡಿಲಿಕೆ ಕೋರಿ ಭವಾನಿ ರೇವಣ್ಣ ಅರ್ಜಿ

ಭವಾನಿ ರೇವಣ್ಣ
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನು ಸಡಿಲಿಕೆ ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರು ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿ, ಆಕ್ಷೇಪ ಸಲ್ಲಿಸಲು ರಾಜ್ಯ ಸರಕಾರಕ್ಕೆ ನೋಟಿ ನೀಡಿ, ಮಾರ್ಚ್ 10ಕ್ಕೆ ವಿಚಾರಣೆಯನ್ನು ಮುಂದೂಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿ, ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ವೇಳೆ ನ್ಯಾಯಾಲಯ ವಿಧಿಸಿರುವ ಷರತ್ತಿನಿಂದಾಗಿ ಭವಾನಿ ಅವರು ಮಂಡ್ಯ ಮತ್ತು ಮೈಸೂರಿಗೆ ಪ್ರಯಾಣಿಸಲಾಗುತ್ತಿಲ್ಲ. ಇದರಿಂದಾಗಿ ತರ್ತು ಪರಿಸ್ಥಿತಿ ಎದುರಾಗಿದ್ದು ತ್ವರಿತಗತಿಯಲ್ಲಿ ಅರ್ಜಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.
ಹೀಗಾಗಿ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ. 2024ರ ಜೂ.7ರಂದು ಆರು ಷರತ್ತುಗಳನ್ನು ವಿಧಿಸಿ ಹೈಕೋರ್ಟ್, ಭವಾನಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿತು.