ಬೆಂಗಳೂರು: ಬಿಜೆಪಿ ನಾಯಕಿ ಆತ್ಮಹತ್ಯೆ

ಮಂಜುಳಾ
ಬೆಂಗಳೂರು: ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದ ಮಂಜುಳಾ ಎಂಬವರು ನಗರದ ಮತ್ತಿಕೆರೆಯ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.
ಮನೆಯಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇನ್ನು ಮಂಜುಳಾ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ. ಈ ಘಟನೆ ಸಂಬಂಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವು ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದ ಮಂಜುಳಾ ಅವರು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಆಗಿದ್ದರು. ಇತ್ತೀಚೆಗೆ ಮಂಜುಳಾ ಅವರು ತಮ್ಮ ಪತಿಯನ್ನು ಕಳೆದುಕೊಂಡು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಮಂಜುಳಾ ಅವರು ಇತ್ತೀಚೆಗೆ ಬಿಜೆಪಿ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದಿದ್ದರು ಎನ್ನಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.