ರಶ್ಯಾದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರುವಂತೆ ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಒತ್ತಾಯ
ಬೆಂಗಳೂರು: ಕೇಂದ್ರ ಸರಕಾರವು, ರಶ್ಯಾದಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ವಾಪಸ್ ಕರೆತರಲು ಕ್ರಮ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಅಮಾಯಕರನ್ನು ಕರೆದುಕೊಂಡು ಹೋಗಿ ರಶ್ಯಾ, ಖಾಸಗಿ ಸೇನೆಗೆ ನೇಮಿಸಿ ಕೊಂಡು ಉಕ್ರೇನ್ ಮತ್ತು ರಶ್ಯಾ ನಡುವಿನ ಸಂಘರ್ಷಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ವಿಚಾರ ತಮ್ಮ ಗಮನಕ್ಕೂ ಬಂದಿದೆ. ಈ ಬಗ್ಗೆ ನಿನ್ನೆ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಚರ್ಚೆ ಮಾಡಿದ್ದೇನೆ’ ಎಂದು ಹೇಳಿದರು.
‘ಉತ್ತರ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ರಶ್ಯಾ ಯುದ್ಧದಲ್ಲಿ ಸಿಲುಕಿದ್ದಾರೆ. ಕನ್ನಡಿಗರೂ ಇದ್ದಾರೆ. ಅವರನ್ನು ರಕ್ಷಿಸಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಬೇಕು. ಈ ಕುರಿತು ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರಕ್ಕೆ ಪತ್ರ ಬರೆಯುತ್ತೇನೆಂದು ತಿಳಿಸಿದ್ದಾರೆಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.
ಸ್ವಾಗತ: ಪಕ್ಷದ ತತ್ವ-ಸಿದ್ಧಾಂತ ಒಪ್ಪಿಕೊಂಡು ಯಾರು ಬೇಕಾದರೂ ಕಾಂಗ್ರೆಸ್ ಪಕ್ಷವನ್ನು ಸೇರಬಹುದು. ಮುಂಬೈ ಫ್ರೆಂಡ್ಸ್, ದಿಲ್ಲಿ ಫ್ರೆಂಡ್ಸ್, ಮಂಗಳೂರು ಫ್ರೆಂಡ್ಸ್, ಬೆಂಗಳೂರು ಫ್ರೆಂಡ್ಸ್ ಸೇರಿದಂತೆ ಯಾರೇ ಆದರೂ ಕಾಂಗ್ರೆಸ್ ಪಕ್ಷವನ್ನು ಸೇರಲು ಮುಕ್ತ ಆಹ್ವಾನವಿದೆ ಎಂದು ಪ್ರಿಯಾಂಕ್ ಖರ್ಗೆ, ಬಿಜೆಪಿ ಶಾಸಕ ಸೋಮಶೇಖರ್ ಸೇರಿದಂತೆ ಇನ್ನಿತರ ಬಗ್ಗೆ ಪ್ರತಿಕ್ರಿಯೆ ನೀಡಿದರು.