ಮೀನುಗಾರಿಕೆ ಅಭಿವೃದ್ಧಿ ನಿಗಮದಲ್ಲೂ ಫಲಾನುಭವಿ ಆಧಾರಿತ ವಿಧಾನ : ಸಚಿವ ಸಂಪುಟ
ವಿವಿಧ ವಸತಿ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕೆ ಸಹಾಯಧನ

ಬೆಂಗಳೂರು : 2024-25ನೇ ಸಾಲಿನಲ್ಲಿ 10 ಸಾವಿರ ವಸತಿ ರಹಿತ ಮೀನುಗಾರರಿಗೆ ಸರಕಾರದ ವಿವಿಧ ವಸತಿ ಯೋಜನೆಗಳಡಿ ಮನೆಗಳನ್ನು ನಿರ್ಮಿಸಲು ಸಹಾಯಧನ ನೀಡುವ ಯೋಜನೆಯನ್ನು ರಾಜೀವ್ ಗಾಂಧಿ ವಸತಿ ನಿಗಮವು ಅನುಸರಿಸುವ ಫಲಾನುಭವಿ ಆಧಾರಿತ ವಿಧಾನದಂತೆ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಮೂಲಕ ಅನುಷ್ಠಾನಗೊಳಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಸಮಾಜ ಕಲ್ಯಾಣ ಇಲಾಖೆಯ 63 ಡಾ.ಬಿ.ಆರ್.ಅಂಬೇಡ್ಕರ್ ವಿದ್ಯಾರ್ಥಿ ನಿಲಯಗಳ ಕಟ್ಟಡವನ್ನು 441 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಕೇಂದ್ರ ಪ್ರವಾಸೋದ್ಯಮ ಮಂತ್ರಾಲಯದಿಂದ “ಪ್ರಸಾದ್” ಯೋಜನೆಯಡಿಯಲ್ಲಿ ಅನುಮೋದನೆಗೊಂಡಿರುವ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಾನವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಯೋಜನೆಯನ್ನು ರೂ.61.99 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಮೊತ್ತದಲ್ಲಿ ಪ್ರವಾಸೋದ್ಯಮ ಇಲಾಖೆಯ ಮೂಲಕ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಎಸೆಸೆಲ್ಸಿ ಮತ್ತು ಅದರ ತತ್ಸಮಾನ ವಿದ್ಯಾರ್ಥಿಗಳ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸಿಸಿರುವ ಮತ್ತು ಸದರಿ ವಿದ್ಯಾಭ್ಯಾಸವನ್ನು ಕನ್ನಡ ಮಾಧ್ಯಮದಲ್ಲಿ ಮಾಡಿರುವ ಮತ್ತು ಈ ಹಿಂದೆ ಕೆಪಿಎಸ್ಸಿ ಮತ್ತು ಇತರ ಆಯ್ಕೆ ಪ್ರಾಧಿಕಾರಗಳು ನಡೆಸಿರುವ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆಯಿಂದ ವಿನಾಯಿತಿ ನೀಡಲು ಪ್ರಸ್ತಾಪಿಸಲಾಗಿತ್ತು. ಈ ಸಂಬಂಧ ರಾಜ್ಯಪತ್ರದಲ್ಲಿ ಪ್ರಕಟಿಸಿ, 15 ದಿನಗಳ ಒಳಗಾಗಿ ಆಕ್ಷೇಪಣೆ, ಸಲಹೆಗಳನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ.
ಕೋಲಾರ ಜಿಲ್ಲೆಯ ಮಾಲೂರು ಪುರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಬಸ್ ನಿಲ್ದಾಣದ ಕಾಮಗಾರಿಯನ್ನು 20.98 ಕೋಟಿ ರೂ. ಹಾಗೂ ಮೈಸೂರಿನ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣವನ್ನು 20 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ವಿಧೇಯಕಗಳಿಗೆ ಅನುಮೋದನೆ: 2025ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ಧಿ)(ತಿದ್ದುಪಡಿ)ವಿಧೇಯಕ, ಕರ್ನಾಟಕ ಅಧಿಕ ಬಡ್ಡಿ ನಿಷೇಧ(ತಿದ್ದುಪಡಿ) ವಿಧೇಯಕ, ಕರ್ನಾಟಕ ಗಿರಿವಿದಾರರ(ತಿದ್ದುಪಡಿ) ವಿಧೇಯಕ, ಕರ್ನಾಟಕ ಲೇವಾದೇವಿದಾರರ (ತಿದ್ದುಪಡಿ) ವಿಧೇಯಕ ಹಾಗೂ 2024ನೇ ಸಾಲಿನ ಕರ್ನಾಟಕ ನಾಗರಿಕ ಸೇವಾ(ನೇರ ನೇಮಕಾತಿ)(ಸಾಮಾನ್ಯ)(ತಿದ್ದುಪಡಿ)ನಿಯಮಗಳಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಅನ್ನಭಾಗ್ಯ ಯೋಜನೆಯಡಿ ಅಂತ್ಯೋದಯ ಅನ್ನ ಯೋಜನೆ(ಎಎವೈ) ಮತ್ತು ಆದ್ಯತಾ ಪಡಿತರ ಚೀಟಿಗಳ(ಪಿಎಚ್‍ಎಚ್) ಪಡಿತರ ಫಲಾನುಭವಿಗಳ ಕುಟುಂಬದ ಮುಖ್ಯಸ್ಥರಿಗೆ ನೇರ ನಗದು ವರ್ಗಾವಣೆ ಮೂಲಕ ಹಣ ನೀಡುವ ಬದಲಾಗಿ 5 ಕೆಜಿ ಅಕ್ಕಿಯನ್ನು ವಿತರಿಸಲು ಫೆ.19ರಂದು ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ ನೀಡಲಾಯಿತು.