2ನೇ ಹಂತದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 12 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಗಳಿವೆ : ಡಿ.ಕೆ.ಶಿವಕುಮಾರ್
ಬೆಂಗಳೂರು: 2ನೇ ಹಂತದ ಚುನಾವಣೆಯಲ್ಲಿ 14 ಲೋಕಸಭಾ ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳಿವೆ. ಪ್ರಚಾರ ಕಾರ್ಯ ಮುಕ್ತಾಯಗೊಳ್ಳಲಿ. ಆ ಬಳಿಕ ಈ ಕುರಿತು ಪ್ರತಿಕ್ರಿಯೆ ನೀಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, "ಎಐಸಿಸಿ ಮುಖಂಡರಾದ ಪ್ರಿಯಾಂಕಾ ಗಾಂಧಿ ಅವರು ಇಂದು ದಾವಣಗೆರೆ ಹಾಗೂ ಗದಗದಲ್ಲಿ ಪ್ರಚಾರ ಮಾಡಲಿದ್ದಾರೆ. ಎಲ್ಲೆಡೆ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿವೆ. ದಕ್ಷಿಣ ಕರ್ನಾಟಕಕ್ಕಿಂತಲೂ ಉತ್ತರ ಕರ್ನಾಟದ ಭಾಗಗಳಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಪಡೆಯುವ ನಿರೀಕ್ಷೆ ಇದೆ" ಎಂದು ಭರವಸೆ ವ್ಯಕ್ತಪಡಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಐದು ಕ್ಷೇತ್ರಗಳ ಪೈಕಿ ಐದೂ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳು ಹಾಗೂ ರಾಜ್ಯ ಸರಕಾರದ ಆಡಳಿತ ವೈಖರಿ ರಾಜ್ಯದ ಜನರಿಗೆ ಮೆಚ್ಚುಗೆಯಾಗಿದೆ. ಹಳ್ಳಿ ಮಟ್ಟದಲ್ಲೂ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಅಲೆ ಇದೆ ಎಂದು ಅವರು ತಿಳಿಸಿದರು.
ಮಳೆ ಬೀಳಲಿ ಎಂದು ಪ್ರಾರ್ಥಿಸುತ್ತೇನೆ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆ ಬೀಳಲಿ. ಏನಾದರೂ ಆಗಲಿ ಮಳೆ ಬೀಳಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಒಂದು ದಿನ ಮಳೆ ಬಿದ್ದರೆ ಸಾವಿರಾರು ಕೋಟಿ ರೂ.ಉಳಿಯುತ್ತದೆ. ಮಳೆ ಬೀಳದೇ ಇದ್ದರೆ ಕೊಳವೆ ಬಾವಿ ಕೊರೆಯುತ್ತಲೇ ಇರುತ್ತಾರೆ. ಚೆನ್ನಾಗಿ ಮಳೆಯಾಗಲಿ, ಭೂಮಿ ನೆನೆಯಲಿ ಎಂದು ಅವರು ತಿಳಿಸಿದರು.