ಕೋಲಾರದಿಂದ ಕೆ.ವಿ.ಗೌತಮ್ ಗೆ ಕಾಂಗ್ರೆಸ್ ಟಿಕೆಟ್ ; ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದೇನು?
ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ವಿ.ಗೌತಮ್ ಅವರನ್ನು ಆಯ್ಕೆ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ನನ್ನ ಅಳಿಯನಿಗೆ ಟಿಕೆಟ್ ಕೊಡಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿತ್ತು. ಆದರೆ, ಶಾಸಕರ ವಿರೋಧದಿಂದಾಗಿ ಸಾಧ್ಯವಾಗಲಿಲ್ಲ. ಶಾಸಕರು ಹಾಗೂ ನಾವು ಒಟ್ಟಾಗಿ ಮುಂದುವರೆಯಲು ಆಗಿಲ್ಲ. ಅಂತಿಮವಾಗಿ ಗೌತಮ್ ಅವರನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದರು.
ನಾನು ಕಾಂಗ್ರೆಸ್ ಪರವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ. ನನಗೆ ಯಾವ ಬೇಸರವೂ ಇಲ್ಲ. ಕಾಂಗ್ರೆಸ್ ಪಕ್ಷ ಕೋಲಾರದಲ್ಲಿ ಗೆಲ್ಲಬೇಕು ಅದಕ್ಕಾಗಿ ನಾವೆಲ್ಲ ಒಗ್ಗಟ್ಟಾಗಿ ಕೆಲಸ ಮಾಡಬೇಕು. ನಾನು 7 ಬಾರಿ ಸಂಸದ, 10 ವರ್ಷ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯನಾಗಿ ಕೆಲಸ ಮಾಡಿದ್ದೇನೆ ಎಂದು ಮುನಿಯಪ್ಪ ಹೇಳಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ನಾನು ಸೋತರೂ ನನಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿ, ಶಾಸಕನಾಗಿ ಮಾಡಿ, ಮಂತ್ರಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ನಾನು ಇನ್ನೇನು ನಿರೀಕ್ಷೆ ಮಾಡಲಿ. ಹೈಕಮಾಂಡ್ ಕೈಗೊಂಡಿರುವ ನಿರ್ಧಾರವನ್ನು ಸ್ವಾಗತಿಸಿ, ಅದರಂತೆ ನಾನು ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಅವರು ತಿಳಿಸಿದರು.