ಬೆಂಗಳೂರು ನಗರದ ಹಲವೆಡೆ ಮುಂದುವರೆದ ಮಳೆ
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ʼಯೆಲ್ಲೋ ಅಲರ್ಟ್ʼ
ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕು ಪಡೆದಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆ ಮುಂದುವರೆದಿದೆ. ಈ ಹಿನ್ನೆಲೆ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಅ.31ರಂದು ಎರಡು ದಿನಗಳ ಕಾಲ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ನ.1ರಂದು ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಸಹ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.
ಅದೇ ರೀತಿ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಮೈಸೂರು, ಚಿತ್ರದುರ್ಗ, ಹಾಸನ, ಮಂಡ್ಯ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಉಳಿದಂತೆ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಸಹ ವರುಣನ ಅಬ್ಬರ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಮಳೆ: ಬೆಂಗಳೂರು ನಗರ ಮತ್ತು ಸುತ್ತಮುತ್ತಲೀನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಸ್ಥಳಗಳಲ್ಲಿ ಮುಂಜಾನೆಯ ಸಮಯದಲ್ಲಿ ಮಂಜು ಬೀಳುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.