ಅಕ್ರಮ ಹಣ ಗಳಿಕೆ ಪ್ರಕರಣ | ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿ.ಕೆ.ಶಿವಕುಮಾರ್
ಬೆಂಗಳೂರು : ಅಕ್ರಮ ಹಣ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾಯುಕ್ತ ವಿಚಾರಣೆಗೆ ಗುರುವಾರ ಹಾಜರಾಗಿದ್ದಾರೆ.
ಸಂಪುಟ ಸಭೆಯಲ್ಲಿ ಭಾಗಿಯಾಗಿದ್ದ ಡಿ.ಕೆ.ಶಿವಕುಮಾರ್ ಅರ್ಧದಲ್ಲೇ ಎದ್ದು ಹೊರಬಂದು ಲೋಕಾಯುಕ್ತ ಕಚೇರಿಗೆ ತೆರಳಿ ಹೇಳಿಕೆ ನೀಡಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಸತೀಶ್ ಎಂಬುವರು ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಈ ಹಿಂದೆ ಯಡಿಯೂರಪ್ಪ ನೇತೃತ್ವದ ಸರಕಾರ ನೀಡಿದ್ದ ಅನುಮತಿಯನ್ನು ಪ್ರಸಕ್ತ ಕಾಂಗ್ರೆಸ್ ಸರಕಾರದ ಸಚಿವ ಸಂಪುಟ ಸಭೆ ಹಿಂಪಡೆದಿತ್ತು.
ಬಳಿಕ ಡಿ.ಕೆ.ಶಿವಕುಮಾರ್ ಅವರ ಮೇಲಿರುವ ಆರೋಪವನ್ನು ಲೋಕಾಯುಕ್ತ ತನಿಖೆಗೆ ವಹಿಸಲಾಗಿತ್ತು. ಸಿಬಿಐ ರಾಜ್ಯ ಸರಕಾರದ ನಿರ್ಣಯವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿತ್ತು. ಈ ಕುರಿತು ನ್ಯಾಯಾಲಯ ಯಾವುದೇ ನಿರ್ದೇಶನ ನೀಡಿರಲಿಲ್ಲ.
ಈ ಬಗ್ಗೆ ಡಿ.ಕೆ.ಶಿವಕುಮಾರ್ ಅವರು ಸಿಬಿಐ ತನಿಖೆಯಿಂದ ತಪ್ಪಿಸಿಕೊಳ್ಳಲು ಲೋಕಾಯುಕ್ತ ತನಿಖೆಗೆ ಆದೇಶಿಸಲಾಗಿದೆ ಎಂಬ ಆರೋಪಗಳು ಕೇಳಿಬಂದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ತನಿಖಾಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿರುವುದಾಗಿ ತಿಳಿದುಬಂದಿದೆ.