ಬೆಂಗಳೂರಿನಲ್ಲಿ ಮಳೆ ಅವಾಂತರ | ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ಎಚ್ಚರ ವಹಿಸಿ : ಡಿ.ಕೆ.ಶಿವಕುಮಾರ್
ಬೆಂಗಳೂರು : ಮುಂದಿನ 24 ಗಂಟೆಗಳಲ್ಲಿ ನಗರದಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಎಲ್ಲ ಇಲಾಖೆಗಳು ಸರ್ವಸನ್ನದ್ದರಾಗಿ ಕೆಲಸ ಮಾಡಬೇಕು. ಯಾವುದೇ ಜೀವ, ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 1533ಗೆ ಸಾರ್ವಜನಿಕರು ಕರೆ ಮಾಡಿ ಮಳೆ ಹಾನಿ ಸಂಬಂಧಿಸಿದಂತೆ ತಕ್ಷಣ ದೂರು ನೀಡಬಹುದು. ಅಪಾಯಕಾರಿ ಮರ ತೆರವಿಗೆ ಅರಣ್ಯ ಇಲಾಖೆ ಮತ್ತು ಬಿಬಿಎಂಪಿ ಜಂಟಿಯಾಗಿ ಸಮೀಕ್ಷೆ ನಡೆಸಿ ಕಾರ್ಯ ನಿರ್ವಹಿಸಬೇಕು ಎಂದರು.
ತಗ್ಗು ವಸತಿ ಪ್ರದೇಶಗಳಿಗೆ ನೀರು ನುಗ್ಗದಂತೆ ಉತ್ತಮ ಸಾಮರ್ಥ್ಯದ ಪಂಪ್ ಸೆಟ್, ಜನರೇಟರ್‌ಗಳು ಹಾಗೂ ಹೆಚ್ಚು ನೀರು ಹರಿಯುವ ರಾಜಕಾಲುವೆ ಬಳಿ ಜೆಸಿಬಿ, ಟಿಪ್ಪರ್ ಗಳನ್ನು ಮುನ್ನೆಚರಿಕೆ ಕ್ರಮವಾಗಿ ಸಿದ್ದ ಮಾಡಿಕೊಂಡಿರಬೇಕು. ಎನ್‍ಡಿಆರ್ ಎಫ್ ತಂಡದೊಟ್ಟಿಗೂ ಸಂಪರ್ಕದಲ್ಲಿ ಇರಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಸ್ಕಾಂ, ಕೆಪಿಟಿಸಿಎಲ್, ಬಿಬಿಎಂಪಿ, ಜಲಮಂಡಳಿ, ಅರಣ್ಯ ಇಲಾಖೆ ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಯಾವ ಇಲಾಖೆಯೂ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಸೂಚನೆ ನೀಡಿದ್ದೇನೆ. ರಾಜಕಾಲುವೆಗೆ ಸಂಬಂಧಿಸಿದಂತೆ ಒಂದಷ್ಟು ಜನ ನ್ಯಾಯಲಯದಿಂದ ತಡೆಯಾಜ್ಞೆ ತಂದಿರುತ್ತಾರೆ. ಇದನ್ನು ಮುಂದಿಟ್ಟು ಕೊಂಡು ಮೈಗೆ ಎಣ್ಣೆ ಹಚ್ಚಿಕೊಂಡು ಅಧಿಕಾರಿಗಳು ಕೆಲಸದಿಂದ ನುಣುಚಿಕೊಳ್ಳುವಂತಿಲ್ಲ. ಒತ್ತುವರಿಯಾಗಿರುವ ಜಾಗಗಳು ಸರಕಾರದ ಆಸ್ತಿಗಳಾಗಿದ್ದು, ನೀರು ಹರಿಯಲು ತೊಂದರೆಯಾಗುವಲ್ಲಿ ನಿರ್ದಾಕ್ಷಿಣ್ಯವಾಗಿ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ರವಿವಾರ ರಾತ್ರಿ ಸುರಿದ ಮಳೆ ಸಾಕಷ್ಟು ಹಾನಿ ಉಂಟಾಗಿತ್ತು. ಮರಗಳ ತೆರವು ಸೇರಿದಂತೆ ಜನರಿಗೆ ಆಗುತ್ತಿದ್ದ ತೊಂದರೆಗಳನ್ನು ತಕ್ಷಣ ತಪ್ಪಿಸಿದ್ದಾರೆ. ಟ್ರಾಫಿಕ್ ಆಗದಂತೆ ನೋಡಿಕೊಂಡಿದ್ದಾರೆ. ಮೆಟ್ರೋ ಹಳಿ ಮೇಲೂ ಮರ ಬಿದ್ದಿತ್ತು. ಅದನ್ನು ಆದಷ್ಟು ಬೇಗ ತೆರವುಗೊಳಿಸಿದ್ದಾರೆ ಎಂದು ಅವರು ತಿಳಿಸಿದರು.
ಜೂನ್‍ನಲ್ಲಿ ಉತ್ತಮ ಮಳೆ ಬಿದ್ದಿರುವುದು ನನಗೆ ಸಾಕಷ್ಟು ಸಂತೋಷವಾಗಿದೆ. ಮೂರು ಜನರಿಗೆ ಗಾಯಗಳಾಗಿವೆ. ವಾಹನಗಳು ಜಖಂಗೊಂಡಿವೆ. 265 ಮರಗಳು ಬಿದ್ದಿವೆ. 96 ಮರಗಳನ್ನು ತೆರವುಗೊಳಿಸಲಾಗಿದೆ. 365 ಕೊಂಬೆಗಳು ಬಿದ್ದಿದ್ದವು, ಎಲ್ಲವನ್ನು ತೆರವುಗೊಳಿಸಲಾಗಿದೆ. 261 ವಿದ್ಯುತ್ ಕಂಬಗಳು ಬಿದ್ದಿದ್ದವು. ಇದನ್ನು ಸರಿಪಡಿಸಲಾಗುತ್ತಿದೆ ಎಂದು ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.
694 ದೂರುಗಳನ್ನು ಬಿಬಿಎಂಪಿ ಕಂಟ್ರೋಲ್ ರೂಮ್‍ಗೆ ನೀಡಿದ್ದಾರೆ. ಇದರಲ್ಲಿ 525 ದೂರುಗಳನ್ನು ಪರಿಶೀಲಿಸಲಾಗಿದೆ. 69 ದೂರುಗಳು ಉಳಿದುಕೊಂಡಿವೆ. ಇವನ್ನು ಶೀಘ್ರ ಪರಿಹರಿಸಲಾಗುವುದು. ಜನರ ಪ್ರಾಣ ಮುಖ್ಯ. ಆದ ಕಾರಣ ಮುಂಬೈ ರೀತಿ ಹಳೆ ಕಟ್ಟಡಗಳು ಕುಸಿಯುವ ಹಂತದಲ್ಲಿ ಇದ್ದರೆ ಕೂಡಲೇ ಅವುಗಳನ್ನು ಗುರುತಿಸಿ ಸ್ಥಳಾಂತರ ಮಾಡಬೇಕು ಎಂದು ಅವರು ತಿಳಿಸಿದರು.
ಮಳೆ ಬಿದ್ದಾಗ ರಸ್ತೆಗುಂಡಿಗಳನ್ನು ಮುಚ್ಚಿದರೆ ಮತ್ತೆ ಕಿತ್ತು ಹೋಗುವ ಸಾಧ್ಯತೆ ಇರುವ ಕಾರಣ ಈ ಕೆಲಸ ತಡವಾಗಬಹುದು. ಇದೊಂದು ವಿಚಾರ ಹೊರತಾಗಿ ಮಿಕ್ಕ ವಿಚಾರಗಳಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.
ಜೂನ್ 4 ರಂದು ಲೋಕಸಭಾ ಚುನಾವಣೆಯ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ varthabharati.in ನೋಡ್ತಾ ಇರಿ.