ಈಡಿ, ಸಿಬಿಐ, ತೆರಿಗೆ ಇಲಾಖೆ ಎಲ್ಲವೂ ಪ್ರಧಾನಿಗಳ ಗುಲಾಮರಾಗಿ ಕೆಲಸ ಮಾಡುತ್ತಿವೆ : ಮುಖ್ಯಮಂತ್ರಿ ಚಂದ್ರು
ಬೆಂಗಳೂರು: ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.
ಆಮ್ ಆದ್ಮಿ ಪಕ್ಷದ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ವಿರೋಧಿಸಿ ನಗರದ ಸ್ವತಂತ್ರ ಉದ್ಯಾನವನದಲ್ಲಿ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ 'ಇಂಡಿಯಾ' ಒಕ್ಕೂಟವು ಬೃಹತ್ ಶಾಂತಿಯುತ ಪ್ರತಿಭಟನೆಯನ್ನು ನಡೆಸಿತು. ಈ ಸಂದರ್ಭ ಮುಖ್ಯಮಂತ್ರಿ ಚಂದ್ರು ಅವರು ಮಾತನಾಡುತ್ತ, ಕಳೆದ 10 ವರ್ಷಗಳಲ್ಲಿ ನಾವು ನೋಡಿದ್ದು ಪ್ರಜಾಪ್ರಭುತ್ವದ ಕಗ್ಗೋಲೆ, ವಿವಿಧತೆಯಲ್ಲಿ ಏಕತೆಯಿಂದಿರುವ ಭಾರತದ ನಾಶ, ಜನತಂತ್ರ ವ್ಯವಸ್ಥೆಯ ಸರ್ವನಾಶ, ಸಂವಿಧಾನ ಬದಲಿಸುವ ಪ್ರಯತ್ನ, ಪಾರದರ್ಶಕತೆ ಇಲ್ಲದ ಆಡಳಿತ, ಕೋಮುಗಲಭೆಗಳಾಗಿವೆ ಎಂದರು.
ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಕಡಿವಾಣ ಹಾಕುತ್ತಿದ್ದಾರೆ. ದಿಲ್ಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮೂಲಕ ರಾಜ್ಯದ ಆಡಳಿತವನ್ನು ಹತೋಟಿಯಲ್ಲಿಡಲು ಯತ್ನಿಸುತ್ತಿದ್ದಾರೆ. ಜೈಲಿನಲ್ಲಿರಬೇಕಾದ ಕಡುಭ್ರಷ್ಟರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಮಂತ್ರಿ, ಮುಖ್ಯಮಂತ್ರಿಗಳನ್ನಾಗಿಸುತ್ತಿದ್ದಾರೆ. ರಾಜಕೀಯ ಎದುರಾಳಿಗಳನ್ನು ಈಡಿ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ತನಿಖಾ ಸಂಸ್ಥೆಗಳ ಮೂಲಕ ಸುಳ್ಳು ಪ್ರಕರಣಗಳ ಅಡಿ ಆರೋಪಿಗಳಾಗಿಸಿ ಕಿರುಕುಳ ಕೊಡುತ್ತಿದ್ದಾರೆ. ಈ ದೇಶ ಉಳಿಯಬೇಕೆಂದರೆ ಸರ್ವಾಧಿಕಾರಿಯ ಆಡಳಿತಕ್ಕೆ ಅಂತ್ಯಹಾಡಬೇಕು ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.