ತುಮಕೂರು, ಮೈಸೂರು, ಮಂಡ್ಯ, ಕಾರವಾರ, ಶಿವಮೊಗ್ಗದಲ್ಲಿ ಕ್ಯಾನ್ಸರ್ ಆಸ್ಪತ್ರೆಗಳ ಸ್ಥಾಪನೆ: ಡಾ.ಶರಣಪ್ರಕಾಶ್ ಪಾಟೀಲ್
ಡಾ.ಶರಣಪ್ರಕಾಶ್ ಪಾಟೀಲ್
ಬೆಳಗಾವಿ (ಸುವರ್ಣ ವಿಧಾನಸೌಧ) : ತುಮಕೂರು, ಮೈಸೂರು, ಮಂಡ್ಯ, ಕಾರವಾರ, ಶಿವಮೊಗ್ಗದಲ್ಲಿ ಹೊಸದಾಗಿ ಕ್ಯಾನ್ಸರ್ ಆಸ್ಪತ್ರೆಗಳ ಸ್ಥಾಪನೆ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಸೋಮವಾರ ವಿಧಾನ ಪರಿಷತ್ನ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ನಾಗರಾಜ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಶೇ.80ರಷ್ಟಿರುವ ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಚಿಕಿತ್ಸೆ ಇದೆ. ನಮ್ಮ ಸರಕಾರಿ ಆಸ್ಪತ್ರೆಗಳ ಚಿಕಿತ್ಸೆಗೆ ಕಡಿಮೆ ಹಣ ಇದೆ. ಎಪಿಎಲ್ ಕಾರ್ಡ್ದಾರರಿಗೆ ಶೇ.50ರಷ್ಟು ರಿಯಾಯಿತಿ ಕೊಡುವ ಬಗ್ಗೆ ಆರ್ಥಿಕ ಇಲಾಖೆ ಜೊತೆ ಚರ್ಚೆ ಮಾಡುತ್ತೇವೆ ಎಂದರು.
ಬೆಳಗಾವಿಯಲ್ಲಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧಾರವಾಗಿದೆ. ಬೆಳಗಾವಿ ಮೆಡಿಕಲ್ ಕಾಲೇಜು ಆವರಣದಲ್ಲಿ ನಮಗೆ ಜಾಗ ಸಿಗುತ್ತಿಲ್ಲ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಮಾತುಕತೆ ಮಾಡಿ ಸ್ಥಳದ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಡಾ.ಶರಣ ಪ್ರಕಾಶ್ ಪಾಟೀಲ್ ಹೇಳಿದರು.
ಬಡವರ ಚಿಕಿತ್ಸೆಗೆ ಅನುಕೂಲವಾಗುವಂತೆ ಕಾರವಾರ, ಮಂಡ್ಯ, ಶಿವಮೊಗ್ಗ, ಮೈಸೂರು, ತುಮಕೂರಿನಲ್ಲಿ ಹೊಸದಾಗಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆ ಮಾಡಲಾಗುತ್ತಿದೆ ಎಂದು ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.