ಹೋಟೆಲ್‍ಗಳಲ್ಲಿನ ಶೌಚಾಲಯಗಳನ್ನು ಸಾರ್ವಜನಿಕರೂ ಬಳಸಲಿಕ್ಕೆ ಅಗತ್ಯ ಕ್ರಮಕ್ಕೆ ಸೂಚನೆ: ಹೈಕೋರ್ಟ್‍ಗೆ ತಿಳಿಸಿದ ಬಿಬಿಎಂಪಿ
ಬೆಂಗಳೂರು: ಸಾರ್ವಜನಿಕ ರೆಸ್ಟೊರೆಂಟ್ ಮತ್ತು ಹೋಟೆಲ್‍ಗಳಲ್ಲಿನ ಶೌಚಾಲಯಗಳನ್ನು ಸಾರ್ವಜನಿಕರೂ ಬಳಸುವಂತಾಗಬೇಕು. ಈ ನಿಟ್ಟಿನಲ್ಲಿ ಸೂಕ್ತ ಆದೇಶ ಹೊರಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿಯ ಆರೋಗ್ಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದು ಬಿಬಿಎಂಪಿ ಹೈಕೋರ್ಟ್‍ಗೆ ತಿಳಿಸಿದೆ.
ಬೆಂಗಳೂರು ನಗರದಲ್ಲಿನ ಸಾರ್ವಜನಿಕ ಶೌಚಾಲಯಗಳ ಕೊರತೆಯಿರುವ ವಿಚಾರವಾಗಿ ‘ಲೆಟ್ಜ್ ಕಿಟ್ ಫೌಂಡೇಷನ್' ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ಈ ಕುರಿತ ವಸ್ತುಸ್ಥಿತಿ ವರದಿಯನ್ನು ನ್ಯಾಯಪೀಠಕ್ಕೆ ಒದಗಿಸಿದರು. ವರದಿಯಲ್ಲಿ ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ ಮತ್ತು ನಿರ್ವಹಣೆ ಮಾಡಲು ಬಿಬಿಎಂಪಿ ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯು 2023ರ ನ.29ರಂದು ಸಭೆ ನಡೆಸಿದೆ ಮತ್ತು ಸಾರ್ವಜನಿಕ ರೆಸ್ಟೊರೆಂಟ್ ಮತ್ತು ಹೋಟೆಲ್‍ಗಳಲ್ಲಿನ ಶೌಚಾಲಯಗಳನ್ನು ಸಾರ್ವಜನಿಕರೂ ಬಳಸುವಂತಾಗಬೇಕೆಂದು ತಿಳಿಸಲಾಗಿದೆ ಎಂದು ವಿವರಿಸಲಾಗಿದೆ.
ವಸ್ತುಸ್ಥಿತಿ ವರದಿ: ಬಿಬಿಎಂಪಿ ವ್ಯಾಪ್ತಿಯಲ್ಲಿರುವ 172 ಇಂದಿರಾ ಕ್ಯಾಂಟೀನ್‍ಗಳಲ್ಲಿರುವ ಶೌಚಾಲಯಗಳನ್ನು ಸಾರ್ವಜನಿಕರ ಬಳಕೆಗೆ ಅನುಮತಿಸುವಂತೆ ಸಮಿತಿ ಅಧ್ಯಕ್ಷರು ಪಾಲಿಕೆಯ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಿಗೆ ಸೂಚಿಸಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ 246 ಸಾರ್ವಜನಿಕ ಶೌಚಾಲಯ, 85 ಹಾಲಿ ಶೌಚಾಲಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು 229 ಇ-ಶೌಚಾಲಯಗಳ ಕಾರ್ಯಚರಣೆ ಹಾಗೂ ನಿರ್ವಹಣೆಗೆ ಟೆಂಡರ್ ಕರೆಯಲಾಗಿದೆ ಎಂದು ತಿಳಿಸಲಾಗಿದೆ.
ಸರಕಾರಿ ಮತ್ತು ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ 100 ಶೀ (ಮಹಿಳೆಯರ ಬಳಕೆಗೆ) ನಿರ್ಮಿಸಲು ಶೀಘ್ರ ಟೆಂಡರ್ ಆಹ್ವಾನಿಸಲಾಗುವುದು. ಅದಕ್ಕಾಗಿ 25 ಕೋಟಿ ರೂ. ಅನುದಾನವನ್ನು 2024-25ನೇ ಸಾಲಿನ ಬಜೆಟ್‍ನಲ್ಲಿ ಮೀಸಲಿಡಲು ಪ್ರಸ್ತಾವಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಹೊಸದಾಗಿ 246 ಸಾರ್ವಜನಿಕ ಶೌಚಾಲಯ ನಿರ್ಮಿಸಲು ಈಗಾಗಲೇ ಟೆಂಡರ್ ಅಧಿಸೂಚನೆ ಹೊರಡಿಸಲಾಗಿದೆ.
ಹೊಸ ಶೌಚಾಲಯಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮತ್ತು ಅಂಗವಿಕಲರ ಬಳಕೆಗೆ ಪ್ರತ್ಯೇಕ ಶೌಚಾಲಯ ಬ್ಲಾಕ್ ಒದಗಿಸಲು ಕ್ರಮ ವಹಿಸಲಾಗಿದೆ. 185 ಹಾಲಿ ಶೌಚಾಲಯಗಳನ್ನು ಮೇಲ್ದರ್ಜೆಗೇರಿಸಲು ಟೆಂಡರ್ ಕರೆಯಲಾಗಿದೆ. 229 ಇ-ಶೌಚಾಲಯಗಳ ಕಾರ್ಯಾಚರಣೆ ಅಥವಾ ನಿರ್ವಹಣೆಗೆ ಟೆಂಡರ್ ಕರೆಯಲಾಗಿದೆ’ ಎಂದು ವರದಿಯಲ್ಲಿ ವಿವರಿಸಲಾಗಿದೆ.