ಎಚ್.ಡಿ.ರೇವಣ್ಣ ಜಾಮೀನು ರದ್ದು ಕೋರಿದ್ದ ಸಿಟ್ ಅರ್ಜಿ: ಆಕ್ಷೇಪಣೆ ಸಲ್ಲಿಸಲು ರೇವಣ್ಣರಿಗೆ ಸೂಚಿಸಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು, ಮೇ 31: ಮೈಸೂರಿನ ಕೆ.ಆರ್. ನಗರದ ಅತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಅಧೀನ ನ್ಯಾಯಾಲಯ ನೀಡಿರುವ ಜಾಮೀನು ರದ್ದು ಕೋರಿ ಎಸ್ಐಟಿ ಪೊಲೀಸರು ಸಲ್ಲಿಸಿದ್ದ ಅರ್ಜಿ ಕುರಿತಂತೆ ಶಾಸಕ ಎಚ್.ಡಿ.ರೇವಣ್ಣಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ.
ರೇವಣ್ಣರಿಗೆ ಜಾಮೀನು ಮಂಜೂರು ಮಾಡಿರುವ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸರಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸಿ ಆಕ್ಷೇಪಣೆ ಸಲ್ಲಿಸಲು ರೇವಣ್ಣಗೆ ಸೂಚಿಸಿ ವಿಚಾರಣೆ ಮುಂದೂಡಿದೆ.
ವಿಚಾರಣೆ ಸರಕಾರದ ಪರ ವಿಶೇಷ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್ ಮಂಡಿಸಿದ ವಾದ ಮಂಡಿಸಿ, ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 364(ಎ) ಅನ್ವಯವಾಗುವುದಿಲ್ಲ ಎಂದು ವಿಚಾರಣಾ ನ್ಯಾಯಾಲಯ ಅಭಿಪ್ರಾಯಪಟ್ಟು ಜಾಮೀನು ಮಂಜೂರು ಮಾಡಿದೆ. ಆದರೆ, ಪ್ರಕರಣದಲ್ಲಿ ಸೆಕ್ಷನ್ 364 (ಎ) ಅನ್ವಯವಾಗುತ್ತದೆ. ಆದ್ದರಿಂದ ಜಾಮೀನು ರದ್ದುಪಡಿಸಬೇಕು. ಅಲ್ಲದೆ, ದೂರು ನೀಡದಂತೆ ಸಂತ್ರಸ್ತೆಗೆ ನಿರ್ಬಂಧ ಹೇರಲಾಗಿದೆ ಎಂದು ಕೋರ್ಟ್ ಗಮನಕ್ಕೆ ತಂದರು. ವಾದ ಆಲಿಸಿದ ಪೀಠ ಆಕ್ಷೇಪಣೆ ಸಲ್ಲಿಸುವಂತೆ ರೇವಣ್ಣಗೆ ನೋಟಿಸ್ ಜಾರಿಗೊಳಿಸಿದೆ.