ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹಧನ 2 ಲಕ್ಷ ರೂ.ಗೆ ಹೆಚ್ಚಳ : ಎಚ್.ಸಿ.ಮಹದೇವಪ್ಪ
ಎಚ್.ಸಿ.ಮಹದೇವಪ್ಪ
ಬೆಂಗಳೂರು : ಐಐಟಿ, ಐಐಎಂ, ಎನ್ಐಟಿನಂತಹ ರಾಷ್ಟ್ರೀಯ ಸಂಸ್ಥೆಗಳಲ್ಲಿ ಓದುವ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನವನ್ನು 1 ರಿಂದ 2 ಲಕ್ಷ ರೂ.ಗೆ ಹೆಚ್ಚಳ ಮಾಡಿ ಎಂದು ಸರಕಾರವು ಆದೇಶ ಹೊರಡಿಸಿದ್ದು, ಇದು ಪರಿಶಿಷ್ಟ ಸಮುದಾಯದ ವಿದ್ಯಾರ್ಥಿಗಳ ಹೆಚ್ಚಿನ ಶೈಕ್ಷಣಿಕ ಸಾಧನೆಗೆ ಕಾರಣವಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.
ಗುರುವಾರ ಪ್ರಕಟನೆ ಹೊರಡಿಸಿರುವ ಅವರು, ಪಿಯುಸಿ ಪರೀಕ್ಷೆಯಲ್ಲಿ 95ಕ್ಕೂ ಹೆಚ್ಚಿನ ಅಂಕಗಳನ್ನು ಪಡೆದು, ನೀಟ್ ಪ್ರವೇಶ ಪರೀಕ್ಷೆಯ ಮೂಲಕ ಸರಕಾರಿ ಕೋಟಾದಡಿ ಪ್ರವೇಶ ದೊರಕದೇ ಮ್ಯಾನೇಜ್ಮೆಂಟ್ ಕೋಟಾದಡಿ ಎಂಬಿಬಿಎಸ್ ಕೋರ್ಸ್ ಗೆ ಸೀಟು ಪಡೆದುಕೊಂಡ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂ.ಗಳ ಶುಲ್ಕವನ್ನು ಒದಗಿಸಲು ಸರಕಾರ ತೀರ್ಮಾನಿಸಿದೆ ಎಂದಿದ್ದಾರೆ.
ಎಂಬಿಬಿಎಸ್ ಪದವಿಯನ್ನು ಪಡೆಯುತ್ತಿರುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಮೊದಲ ವರ್ಷ ಶೇ.60ಗೂ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದರೆ ಅವರಿಗೆ ಮತ್ತೆ 25 ಲಕ್ಷ ರೂ.ಗಳ ಪ್ರೋತ್ಸಾಹಧನವನ್ನು ನೀಡಲಾಗುವುದು. ಶಿಕ್ಷಣವೇ ಸಮಾಜವನ್ನು ಬದಲಿಸುವ ಕೀಲಿಕೈ ಎಂಬ ಅಂಶವನ್ನು ಮನಗಂಡು ಈ ಒಂದು ಮಹತ್ವದ ಘೋಷಣೆಯನ್ನು ಸರಕಾರವು ಮಾಡಿದ್ದು, ಇದರಿಂದ ಉನ್ನತ ಶಿಕ್ಷಣ ಮಾಡಬೇಕೆಂಬ ವಿದ್ಯಾರ್ಥಿಗಳ ಕನಸು ನನಸಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಐಐಟಿ, ಐಐಎಂನಂತಹ ಶಿಕ್ಷಣ ಸಂಸ್ಥೆಗಳಲ್ಲಿ ಓದುವಂತಹ ಪರಿಶಿಷ್ಟ ಜಾತಿ ಮತ್ತು ಪಂಗಡದ ಮಕ್ಕಳು ದೇಶ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಬೇಕು. ಆ ಮೂಲಕ ಸಮೃದ್ಧ ಮತ್ತು ಸಶಕ್ತ ರಾಷ್ಟ್ರದ ನಿರ್ಮಾಣವಾಗಬೇಕು ಎಂದು ಡಾ.ಎಚ್.ಸಿ.ಮಹದೇವಪ್ಪ ಕರೆ ನೀಡಿದ್ದಾರೆ.
ಈಗಾಗಲೇ ಪ್ರಬುದ್ಧ ಯೋಜನೆಯಡಿ ವಿದೇಶಿ ವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಿಸಿರುವ ನಮ್ಮ ಸರಕಾರವು ಇದೀಗ ಮಕ್ಕಳ ಉತ್ತಮ ಶಿಕ್ಷಣವನ್ನು ಗಮನದಲ್ಲಿಟುಕೊಂಡು ಮುಖ್ಯ ಘೋಷಣೆಯನ್ನು ಮಾಡಿರುತ್ತದೆ. ಹೀಗಾಗಿ ಬಾಬಾ ಸಾಹೇಬರ ಆಶಯದಂತೆ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಹೆಚ್ಚು ಆಸಕ್ತಿ ಹೊಂದಿ, ಶ್ರಮ ಹಾಕಿ ಓದಬೇಕು ಎಂದು ಸಚಿವರು ಆಶಯವನ್ನು ವ್ಯಕ್ತಪಡಿಸಿದ್ದಾರೆ.