ಪೆಟ್ರೋಲ್-ಡಿಸೇಲ್ ದರ ಏರಿಕೆ ಖಂಡಿಸಿ ಸರಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ದುಬಾರಿ ತೆರಿಗೆ ವಿಧಿಸಿರುವುದರ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಿತು.
ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ ಸರಕಾರದ ವಿರುದ್ಧ ಸೈಕಲ್ ಹಾಗೂ ಟಾಂಗಾ ಗಾಡಿಗಳ ಮೂಲಕ ವಿನೂತನವಾಗಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿ ಗೌಡ ಸೇರಿದಂತೆ ಅನೇಕ ನಾಯಕರು ಟಾಂಗಾ ಗಾಡಿ ಹತ್ತಿ, ಸೈಕಲ್ ತುಳಿದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಮಾಜಿ ಸದಸ್ಯರೂ ಆಗಿರುವ ಜೆಡಿಎಸ್ ನಗರ ಘಟಕದ ಅಧ್ಯಕ್ಷ ರಮೇಶ್ ಗೌಡರು, ಕಾಂಗ್ರೆಸ್ ಸರಕಾರ ಜನವಿರೋಧಿ ನೀತಿಗಳನ್ನು ಜನರ ಮೇಲೆ ಹೇರುತ್ತಿದೆ. ಐದು ಗ್ಯಾರಂಟಿಗಳಿಗೆ ಹಣ ಹೊಂದಿಸುವುದಕ್ಕೆ ಜನರ ಕಿಸೆಗೆ ಸರಕಾರ ಕೈ ಹಾಕಿದೆ. ಜನರಿಗೆ ಅಗ್ಗದ ಆಮಿಷಗಳನ್ನು ಒಡ್ಡಿ ಜನರಿಂದಲೇ ದೊಡ್ಡ ಪ್ರಮಾಣದಲ್ಲಿ ಹಣ ಸುಲಿಗೆ ಮಾಡುತ್ತಿದೆ. ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆಯಿಂದ ಈಗ ದಿನಬಳಕೆ ವಸ್ತುಗಳ ಬೆಲೆ ಗಗನಮುಖಿಯಾಗಿದೆ. ಬಡವರು, ಮಧ್ಯಮ ವರ್ಗದ ಜನರ ಬದುಕು ದುಸ್ತರವಾಗಿದೆ ಎಂದು ಅವರು ದೂರಿದರು.
ಕಾರ್ಯಕರ್ತರು ಸರಕಾರದ ವಿರುದ್ಧ ನಾಮಫಲಕ, ಘೋಷಣಾ ಫಲಕಗಳನ್ನು ಹಿಡಿದು ಘೋಷಣೆ ಕೂಗಿದರು. ಅಲ್ಲದೆ, ಕೂಡಲೇ ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಿರುವ ತೆರಿಗೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯ ಮಾಡಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ರಾಜ್ಯ ಕಾನೂನು ವಿಭಾಗದ ಅಧ್ಯಕ್ಷ ಎ.ಪಿ.ರಂಗನಾಥ್, ಬೆಂಗಳೂರು ಮಹಾನಗರ ಕಾರ್ಯಧ್ಯಕ್ಷ ಜೆ.ಟಿ.ರೇವಣ್ಣ, ಬೆಂಗಳೂರು ಮಹಾನಗರದ ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್, ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶೈಲಾ ಸಂತೋಷ್ ರಾವ್ ಸೇರಿದಂತೆ ಪಕ್ಷದ ಮುಖಂಡ ಎಲ್ಲಾ ಕ್ಷೇತ್ರದ ಅಧ್ಯಕ್ಷರು ಕಾರ್ಯಕರ್ತರು ಭಾಗಿಯಾಗಿದ್ದರು.