ರಾಜ್ಯ ಬಜೆಟ್ | ಹೊಸ ನ್ಯಾಯಬೆಲೆ ಅಂಗಡಿ ಪ್ರಾರಂಭ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಅವಶ್ಯಕತೆಗೆ ಅನುಗುಣವಾಗಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಬಜೆಟ್ ಮಂಡಿಸಿದ ಅವರು, ರಾಜ್ಯದ ಬಡವರ ಹಸಿವು ನೀಗಿಸುವ ಉದ್ದೇಶದಿಂದ ಆರಂಭಿಸಲಾದ ಅನ್ನಭಾಗ್ಯ ಯೋಜನೆಯಡಿ, ಇದುವರೆಗೆ ಹೆಚ್ಚುವರಿ 5 ಕೆ.ಜಿ. ಆಹಾರ ಧಾನ್ಯಕ್ಕೆ ಪರ್ಯಾಯವಾಗಿ ನೀಡಲಾಗುತ್ತಿರುವ ಸಹಾಯಧನದ ಬದಲಾಗಿ, 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುವುದು. ಇದರಿಂದ 4.21 ಕೋಟಿ ಫಲಾನುಭವಿಗಳಿಗೆ ಹೆಚ್ಚುವರಿ ಅಕ್ಕಿ ಲಭ್ಯವಾಗಲಿದೆ ಎಂದರು.
ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸಲು ತಂತ್ರಜ್ಞಾನವನ್ನು ಗರಿಷ್ಠ ಬಳಕೆ ಮಾಡಲಾಗುವುದು. ಇದಕ್ಕಾಗಿ ಒಟ್ಟಾರೆ 5 ಕೋಟಿ ರೂ. ವೆಚ್ಚದಲ್ಲಿ ಸಗಟು ಗೋದಾಮುಗಳಿಗೆ ಸಿಸಿಟಿವಿ ಅಳವಡಿಕೆ, ಜಿಪಿಎಸ್ ಆಧಾರಿತ ವಾಹನ ಟ್ರಾಕಿಂಗ್ ವ್ಯವಸ್ಥೆ ಮತ್ತು ಕಮಾಂಡ್ ಕಂಟ್ರೋಲ್ ಸೆಂಟರ್ ಸ್ಥಾಪಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
80 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಮಾತ್ರ ಇರುವ ಮನೆಗಳಿಗೆ ಆಹಾರ ಧಾನ್ಯಗಳನ್ನು ತಲುಪಿಸಲು ಹಿಂದಿನ ವರ್ಷ ‘ಅನ್ನ-ಸುವಿಧಾ’ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 2 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದ್ದು, 75 ವಯಸ್ಸಿನ ಮೇಲ್ಪಟ್ಟ ಹಿರಿಯ ನಾಗರಿಕರು ಮಾತ್ರ ಇರುವ ಮನೆಗಳಿಗೂ ಈ ಸೇವೆ ವಿಸ್ತರಿಸಲಾಗುವುದು. ಇದರಿಂದ 3.30 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಮರ್ಪಕವಾಗಿ ನಿಗಾವಹಿಸಲು ಸಾಧ್ಯವಾಗುವಂತೆ, ನ್ಯಾಯಬೆಲೆ ಅಂಗಡಿಗಳಲ್ಲಿ ಸ್ಥಾಪಿಸಿರುವ ಎಲೆಕ್ಟ್ರಾನಿಕ್ ತೂಕ ಯಂತ್ರ ಮತ್ತು ಪಾಯಿಂಟ್ ಆಫ್ ಸೇಲ್ ಸಿಸ್ಟಮ್‍ಗಳನ್ನು ಸಾರ್ವಜನಿಕ ವಿತರಣಾ ಪದ್ಧತಿಯ ಐಟಿ ವ್ಯವಸ್ಥೆಯೊಂದಿಗೆ ಸಂಯೋಜಿಸಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ಅನ್ನಭಾಗ್ಯ ಯೋಜನೆಯ ಸಗಟು ಲಾಭಾಂಶ ಪ್ರತಿ ಕ್ವಿಂಟಾಲ್‍ಗೆ 35 ರೂ.ಗಳಿಂದ 45 ರೂ.ಗಳಿಗೆ ಹೆಚ್ಚಳ ಮಾಡಲಾಗುವುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಸಮುದಾಯದವರಿಗೆ ಮತ್ತು ಸಹಕಾರ ಸಂಘಗಳಿಗೆ ಹಂಚಿಕೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.