14,750 ಹೊಸ ವಿದ್ಯುತ್ ಚಾಲಿತ ಬಸ್ಸುಗಳ ಸೇರ್ಪಡೆ : ಸಿದ್ದರಾಮಯ್ಯ

ಬೆಂಗಳೂರು : 2025-26ನೇ ಸಾಲಿನಲ್ಲಿ ಪಿಎಂ ಇ-ಡ್ರೈವ್, ಪಿಎಂ-ಇಬಸ್ ಸೇವಾ ಮತ್ತು ಬಾಹ್ಯ ನೆರವಿನ ಯೋಜನೆಯಡಿ ಒಟ್ಟಾರೆ 14,750 ಹೊಸ ವಿದ್ಯುತ್ ಚಾಲಿತ ಬಸ್ಸುಗಳನ್ನು ಸೇರ್ಪಡೆ ಮಾಡುವ ಗುರಿ ಹೊಂದಿದ್ದು, ಇದರಲ್ಲಿ 9,000 ಬಸ್ಸುಗಳನ್ನು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸೇರ್ಪಡೆ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಪ್ರಕಟಿಸಿದ್ದಾರೆ.
ರಾಜ್ಯದ ವಿವಿಧ ಸಾರಿಗೆ ನಿಗಮಗಳಲ್ಲಿ 1,000 ಹೊಸ ಡೀಸೆಲ್ ಬಸ್ಸುಗಳನ್ನು ಜಿಸಿಸಿ ಆಧಾರದಲ್ಲಿ ಸೇರ್ಪಡೆಗೊಳಿಸಲಾಗುವುದು. ಸಾರಿಗೆ ನಿಗಮಗಳಿಗೆ ಆರ್ಥಿಕ ಚೈತನ್ಯ ತುಂಬುವ ಉದ್ದೇಶದಿಂದ 2,000 ಕೋಟಿ ರೂ. ಸಾಲವನ್ನು ಹಣಕಾಸು ಸಂಸ್ಥೆಗಳಿಂದ ಪಡೆಯಲು ನಾಲ್ಕು ಸಾರಿಗೆ ನಿಗಮಗಳಿಗೆ ಸರಕಾರದ ಖಾತರಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಸಕ್ತ ವರ್ಷ ಬೆಂಗಳೂರು ಪೂರ್ವ ಭಾಗದ ಕೆ.ಆರ್.ಪುರಂ ನಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದಲ್ಲಿ ಹೊಸ ಸ್ಯಾಟಲೈಟ್ ಬಸ್ ನಿಲ್ದಾಣ ಹಾಗೂ ಮೈಸೂರಿನ ಬನ್ನಿಮಂಟಪದಲ್ಲಿ ಅತ್ಯಾಧುನಿಕ ಬಸ್ ನಿಲ್ದಾಣವನ್ನು ಒಟ್ಟಾರೆ 120 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಇತರೆ ಘೋಷಣೆಗಳು: ಶಕ್ತಿ ಯೋಜನೆಗೆ 2025-26ನೇ ಸಾಲಿಗೆ 5,300 ಕೋಟಿ ರೂ.ಒದಗಿಸಲಾಗಿದೆ. ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣದ ಜಾಗವನ್ನು ‘ಪ್ರಾಜೆಕ್ಟ್ ಮೆಜೆಸ್ಟಿಕ್’ ಯೋಜನೆಯಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಪುನರ್ ಅಭಿವೃದ್ಧಿಪಡಿಸಿ, ವಾಣಿಜ್ಯ ಸಂಕೀರ್ಣದೊಂದಿಗೆ ಸಾರಿಗೆ ಹಬ್ ನಿರ್ಮಾಣ.
2025-26ನೇ ಸಾಲಿನಲ್ಲಿ ಹೊನ್ನಾವರ, ಚಾಮರಾಜನಗರ ಮತ್ತು ಚಿತ್ರದುರ್ಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ನಿರ್ಮಿಸಲು ಕ್ರಮವಹಿಸಲಾಗುವುದು. ಈ ಉದ್ದೇಶಕ್ಕಾಗಿ 12 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
2025-26ನೆ ಸಾಲಿನಲ್ಲಿ ಐದು ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿನ ದಾಖಲೆಗಳನ್ನು ಒಟ್ಟು 25 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲೀಕರಣಗೊಳಿಸಲಾಗುವುದು. ರಾಜ್ಯದಲ್ಲಿ ವಾಹನ ಸಂಚಾರವನ್ನು ಮೇಲ್ವಿಚಾರಣೆ ಮಾಡಲು ಮತ್ತು ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಹಚ್ಚಿ ನಿಯಂತ್ರಿಸಲು ದಾವಣಗೆರೆ, ಧಾರವಾಡ, ಕಲಬುರಗಿ, ಬೆಳಗಾವಿ, ಚಿತ್ರದುರ್ಗ, ಹಾವೇರಿ, ಹೊಸಪೇಟೆ, ಬಳ್ಳಾರಿ, ವಿಜಯಪುರ, ದಕ್ಷಿಣ ಕನ್ನಡ ಜಿಲ್ಲೆಗಳ ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಎಐ ಆಧಾರಿತ ವಿದ್ಯುನ್ಮಾನ ಕ್ಯಾಮರಾಗಳ ಅಳವಡಿಕೆ.