ರಾಜ್ಯಕ್ಕೆ ಕೆ.ಸಿ.ವೇಣುಗೋಪಾಲ್ ಭೇಟಿ : ಸಿಎಂ, ಡಿಸಿಎಂ ಜೊತೆ ಉಪ ಚುನಾವಣೆ ಕುರಿತು ಚರ್ಚೆ
ಬೆಂಗಳೂರು : ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಕೆ.ಸಿ.ವೇಣುಗೋಪಾಲ್ ಬುಧವಾರ ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಇಲ್ಲಿನ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾಗಿ ಮೂರು ಕ್ಷೇತ್ರಗಳ ಉಪ ಚುನಾವಣೆ ಸಿದ್ದತೆ ಹಾಗೂ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು.
ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ಚನ್ನಪಟ್ಟಣ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುತ್ತಿದ್ದ ಶಿಗ್ಗಾಂವಿ ಹಾಗೂ ಸಂಸದ ಈ.ತುಕಾರಾಮ್ ಪ್ರತಿನಿಧಿಸುತ್ತಿದ್ದ ಸಂಡೂರು ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಮುಡಾ ಹಗರಣ, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದಿಂದಾಗಿ ಸರಕಾರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಜನಾಭಿಪ್ರಾಯ ಮೂಡಿಸಲು ವಿಪಕ್ಷಗಳು ಯತ್ನಿಸುತ್ತಿವೆ. ಆದುದರಿಂದ, ಈ ಮೂರು ಕ್ಷೇತ್ರಗಳ ಉಪ ಚುನಾವಣೆಯನ್ನು ಎಚ್ಚರಿಕೆಯಿಂದ ನಿರ್ವಹಿಸುವಂತೆ ವೇಣುಗೋಪಾಲ್ ಉಭಯ ನಾಯಕರಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಇತ್ತೀಚೆಗೆ ನಡೆದ ಹರಿಯಾಣ ರಾಜ್ಯದ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಈ ಚರ್ಚೆ ವೇಳೆ ಉಲ್ಲೇಖಿಸಿದ ವೇಣುಗೋಪಾಲ್, ಅತೀಯಾದ ಆತ್ಮವಿಶ್ವಾಸ ಬೇಡ. ವಿಪಕ್ಷಗಳ ತಂತ್ರಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಕುರಿತು ಸಿದ್ಧತೆಗಳನ್ನು ಮಾಡಿಕೊಳ್ಳಿ. ಅಭ್ಯರ್ಥಿಗಳ ಆಯ್ಕೆ ಕುರಿತು ಶೀಘ್ರವೇ ಚರ್ಚಿಸಿ ಅಂತಿಮಗೊಳಿಸೋಣ ಎಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.