ಟ್ರಾನ್ಸ್ ಫಾರ್ಮರ್ಗಳನ್ನು ತಕ್ಷಣವೇ ದುರಸ್ತಿಗೊಳಿಸಿ ವಿದ್ಯುತ್ ಪೂರೈಕೆಗೆ ಕ್ರಮ : ಕೆ.ಜೆ.ಜಾರ್ಜ್
ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರ ಅಹವಾಲು ಸ್ವೀಕಾರ
PC : x/@thekjgeorge
ಬೆಂಗಳೂರು: ಮಳೆಯಿಂದ ಹಾನಿಗೊಳಗಾಗಿರುವ ವಿದ್ಯುತ್ ಕಂಬ, ತಂತಿಗಳನ್ನು ಸರಿಪಡಿಸಿ ವಿದ್ಯುತ್ ಮರು ಸ್ಥಾಪಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಟ್ರಾನ್ಸ್ ಫಾರ್ಮರ್ ಗಳನ್ನು ತಕ್ಷಣವೇ ದುರಸ್ತಿಗೊಳಿಸಿ ವಿದ್ಯುತ್ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಲಹೆಯಂತೆ ಬುಧವಾರ ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿದ ಅವರು, ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದರು.
ಈ ಬಾರಿ ಭಾರೀ ಮಳೆಯಿಂದ ಸಮಸ್ಯೆ ಆಗಿದ್ದು, ಹೆಚ್ಚುವರಿ ಸಿಬ್ಬಂದಿ ನೇಮಿಸಿ ತಕ್ಷಣವೇ ವ್ಯವಸ್ಥೆಯನ್ನು ಸರಿಪಡಿಸಲಾಗುತ್ತಿದೆ. ಇಲಾಖೆ ಸಿಬ್ಬಂದಿ ಹಗಲು, ರಾತ್ರಿ ಕೆಲಸ ಮಾಡುತ್ತಿದ್ದಾರೆ. ಇದರ ಮಧ್ಯೆಯೂ ಮಳೆ, ಗಾಳಿ ಮುಂದುವರಿದಿರುವುದರಿಂದ ಕೆಲವೆಡೆ ಇನ್ನೂ ಸಮಸ್ಯೆ ಮುಂದುವರೆದಿದೆ. ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ಕೈಗೊಂಡು ತ್ವರಿತವಾಗಿ ದುರಸ್ತಿ ಕಾರ್ಯ ಕೈಗೊಂಡು ವಿದ್ಯುತ್ ಮರುಸ್ಥಾಪನೆ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.
ಟ್ರಾನ್ಸ್ ಫಾರ್ಮರ್ ಸಮಸ್ಯೆ, ಕುಸುಮ್ ಬಿ ಮತ್ತು ಕುಸುಮ್ ಸಿ ಅಡಿ ಅರ್ಜಿ ಸಲ್ಲಿಸುವುದು, ವಿದ್ಯುತ್ ಮಾರ್ಗಗಳ ಸ್ಥಳಾಂತರ, ಮಳೆಯಿಂದ ವಿದ್ಯುತ್ ಕಂಬ, ತಂತಿ ಮತ್ತು ಪರಿವರ್ತಕಗಳಿಗೆ ಹಾನಿಯಾಗಿ ವಿದ್ಯುತ್ ಪೂರೈಕೆಯಲ್ಲಿ ಆಗಿರುವ ವ್ಯತ್ಯಯಕ್ಕೆ ಸಂಬಂಧಿಸಿದಂತೆ ಕಾರ್ಯಕರ್ತರು ಸಚಿವರ ಮುಂದೆ ಅಹವಾಲುಗಳನ್ನು ಹೇಳಿಕೊಂಡರು.
ಕುಸುಮ್ ಬಿ ಅಡಿ ಈಗಾಗಲೇ ಸ್ವೀಕರಿಸಿರುವ ಅರ್ಜಿಗಳ ಆಧಾರದ ಮೇಲೆ ಸಮೀಕ್ಷೆ ನಡೆಸಲಾಗುತ್ತಿದೆ. ಈ ಪ್ರಕ್ರಿಯೆ ಮುಗಿದ ಕೂಡಲೇ ಫಲಾನುಭವಿಗಳಿಗೆ ಸೋಲಾರ್ ಪಂಪ್ ಸೆಟ್ ಒದಗಿಸಲಾಗುವುದು. ಕುಸುಮ್ ಸಿ ವಿಚಾರದಲ್ಲಿ ಸೋಲಾರ್ ಪ್ಯಾನಲ್ ಅಳವಡಿಸಲು ಭೂಮಿ ಗುರುತಿಸಲಾಗುತ್ತಿದೆ. ಈ ಎರಡೂ ಯೋಜನೆಗಳ ಬಗ್ಗೆ ಸಾರ್ವಜನಿಕರಿಂದ ಇನ್ನಷ್ಟು ಸ್ಪಂದನೆ ಸಿಕ್ಕಿದರೆ ಭವಿಷ್ಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ, ಅದರಲ್ಲೂ ಮುಖ್ಯವಾಗಿ ಐಪಿ ಸೆಟ್ ಗಳಿಗೆ ವಿದ್ಯುತ್ ಸಮಸ್ಯೆ ಎದುರಾಗುವುದಿಲ್ಲ ಎಂದು ಅವರು ಹೇಳಿದರು.
ಲೋಕಸಭಾ ಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಹಲವು ಜಿಲ್ಲೆಗಳಿಗೆ ಭೇಟಿ ನೀಡಿ, ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸುತ್ತಿದ್ದೇನೆ. ಅಧಿಕಾರಿಗಳು ಮತ್ತು ಸಿಬ್ಬಂದಿ, ಜನಪ್ರತಿನಿಧಿಗಳ ಸಲಹೆ ಪಡೆದು ಕೆಲಸ ಮಾಡುವಂತೆ ನಿರ್ದೇಶನ ನೀಡಿದ್ದೇನೆ. ಅದರಂತೆ ಸಮರ್ಪಕ ವಿದ್ಯುತ್ ಪೂರೈಕೆಗೆ ರಾಜ್ಯಾದ್ಯಂತ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಜಾರ್ಜ್ ಹೇಳಿದರು.
ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತರು ತಮ್ಮ ಪ್ರದೇಶಕ್ಕೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಸಚಿವರ ಮುಂದಿಟ್ಟರು. ಎಲ್ಲವನ್ನು ಸಾವಧಾನದಿಂದಲೇ ಆಲಿಸಿದ ಅವರು, ಕಾಲಮಿತಿಯಲ್ಲಿ ಅವುಗಳನ್ನು ಬಗೆಹರಿಸುವುದಾಗಿ ತಿಳಿಸಿದರು.