ಲೋಕಸಭಾ ಚುನಾವಣೆ | ಮನೆಯಿಂದಲೇ ಮತದಾನ ಮಾಡಿದ ಹಿರಿಯ ನಾಗರಿಕರು, ವಿಶೇಷ ಚೇತನರು
ಬೆಂಗಳೂರು : ಮೊದಲ ಹಂತದಲ್ಲಿ ನಡೆಯಲಿರುವ 14 ಕ್ಷೇತ್ರಗಳ ಲೋಕಸಭಾ ಚುನಾವಣೆಗೆ ಮತದಾರರ ಪಟ್ಟಿಯಲ್ಲಿರುವ 85ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ವಿಶೇಷಚೇತನರು ಅಂಚೆ ಮತದಾನ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ನೋಂದಣಿ ಮಾಡಿಕೊಂಡಿರುವ ಹಿರಿಯ ನಾಗರಿಕರು ಹಾಗೂ ವಿಶೇಷ ಚೇತನರು ಅತ್ಯಂತ ಉತ್ಸಾಹದಿಂದಲೇ ತಮ್ಮ ಹಕ್ಕು ಚಲಾಯಿಸಿದರು.
ಎ.18ರ ವರೆಗೆ ಮತದಾರರ ಪಟ್ಟಿಯಲ್ಲಿರುವ ಹಾಗೂ ನೋಂದಣಿ ಮಾಡಿಕೊಂಡಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ವಿಶೇಷ ಚೇತನರು ಮನೆಯಿಂದಲೇ ಗೌಪ್ಯ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಆಯಾ ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿನ ನಿಯೋಜಿತ ಸಿಬ್ಬಂದಿ ಮತದಾರರ ಮನೆಗೆ ತೆರಳಿ ಮತದಾನಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಿದ್ದರು.
ರಾಜ್ಯದಲ್ಲಿ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಒಟ್ಟು 36,691 ಮಂದಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ 12,957 ಮಂದಿ ವಿಶೇಷ ಚೇತನರು ನೋಂದಣಿ ಮಾಡಿಕೊಂಡಿದ್ದು, ಇಂದಿನಿಂದ ಎ.18ರ ವರೆಗೆ ತಮ್ಮ ಹಕ್ಕು ಚಲಾಯಿಸಲಿದ್ದಾರೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಅತ್ಯಂತ ಹೆಚ್ಚು 6,053 ಮಂದಿ, ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ 4,665 ಮಂದಿ ಹಿರಿಯ ನಾಗರಿಕರು ನೋಂದಣಿ ಮಾಡಿಕೊಂಡಿದ್ದಾರೆ.