ಉಪರಾಷ್ಟ್ರಪತಿಯನ್ನು ಬೀಳ್ಕೊಟ್ಟ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್
ಬೆಂಗಳೂರು : ಎರಡು ದಿನಗಳ ಪ್ರವಾಸಕ್ಕಾಗಿ ಅ.25ರಂದು ಬೆಂಗಳೂರಿಗೆ ಆಗಮಿಸಿದ್ದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಅವರ ಪತ್ನಿ ಸುದೇಶ್ ಧನಕರ್ ಅವರನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಶನಿವಾರ ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಆತ್ಮೀಯವಾಗಿ ಬೀಳ್ಕೊಟ್ಟರು.
ಉಪರಾಷ್ಟ್ರಪತಿ ಅ.25ರಂದು ಮಂಡ್ಯ ಜಿಲ್ಲೆಯ ನಾಗಮಂಗಲದ ಬಿ.ಜಿ.ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾಲಯವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಇಂದು ಬೆಂಗಳೂರು ಅರಮನೆ ಮೈದಾನದಲ್ಲಿ ಶೃಂಗೇರಿಯ ಶ್ರೀ ಭಾರತೀ ತೀರ್ಥ ಸ್ವಾಮಿಯ ಸನ್ಯಾಸ ಸ್ವೀಕಾರದ ಸುವರ್ಣ ಮಹೋತ್ಸವದ ನಿಮಿತ್ತ ಶ್ರೀ ವಿಧುಶೇಖರಭಾರತಿ ಸ್ವಾಮಿಯ ದಿವ್ಯಸಾನಿಧ್ಯದಲ್ಲಿ ನಮಃ ಶಿವಾಯ ಸ್ತೋತ್ರಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಇಂದು ಎಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊಸದಿಲ್ಲಿಗೆ ನಿರ್ಗಮಿಸಿದರು.
ಈ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಲೇಹರ್ ಸಿಂಗ್ ಸಿರೋಯ, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯನಂದ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಸತ್ಯವತಿ ಜಿ, ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಸೇರಿದಂತೆ ಗಣ್ಯರು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.