ಮುಡಾ ಪ್ರಕರಣ | ನ.23ರಂದು ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ ವಿಚಾರಣೆ
ಸಿದ್ದರಾಮಯ್ಯ
ಬೆಂಗಳೂರು: ಮುಡಾ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿಯನ್ನು ವಿಚಾರಣೆ ನಿಗದಿಪಡಿಸಲು ಸಿಎಂ ಸಿದ್ದರಾಮಯ್ಯ ಪರ ವಕೀಲರು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ. ವಿಚಾರಣೆ ವೇಳೆ ಮುಖ್ಯಮಂತ್ರಿ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠದಲ್ಲಿ ಮನವಿ ಮಾಡಿದರು.
ಭ್ರಷ್ಟಾಚಾರ ತಡೆ ಕಾಯ್ದೆ 17 ಎ ಅಡಿಯಲ್ಲಿ ತನಿಖೆಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಅರ್ಜಿ ಸಲ್ಲಿಸಿದ್ದರು. ಏಕಸದಸ್ಯ ಪೀಠ ಸಿದ್ದರಾಮಯ್ಯ ರಿಟ್ ಅರ್ಜಿ ವಜಾಗೊಳಿಸಿತ್ತು. ಹೀಗಾಗಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಸಿದ್ದರಾಮಯ್ಯ ಮೇಲ್ಮನವಿ ಸಲ್ಲಿಸಿದ್ದರು.
ವಿಚಾರಣೆ ವೇಳೆ ತುರ್ತು ವಿಚಾರಣೆ ಅಗತ್ಯವಿದೆಯೇ ಎಂದು ಸಿಜೆ ಪ್ರಶ್ನಿಸಿದರು. ಇದಕ್ಕೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ಪರ ವಕೀಲರು ತುರ್ತು ಅವಶ್ಯಕತೆ ಸೃಷ್ಟಿಯಾಗಿದೆ. ನ.23ಕ್ಕೆ ವಿಚಾರಣೆಗೆ ಮನವಿ ಮಾಡಿದರು. ಹಿರಿಯ ವಕೀಲ ಅಭಿಷೇಕ್ ಸಿಂಘ್ವಿಯವರ ಮನವಿಯನ್ನು ಪುರಸ್ಕರಿಸಿದ ಹೈಕೋರ್ಟ್ ವಿಚಾರಣೆಯನ್ನು ನ.23ಕ್ಕೆ ನಿಗದಿಪಡಿಸಿದೆ.