ಬಿಬಿಎಂಪಿ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ದಾಳಿ
ಬೆಂಗಳೂರು : ಆದಾಯಕ್ಕಿಂತ ಅಧಿಕ ಅಸ್ತಿ ಸಂಪಾದನೆ ಹಾಗೂ ವಿವಿಧ ಯೋಜನೆಗಳಲ್ಲಿ ಅಕ್ರಮ ನಡೆದಿರುವ ಆರೋಪ ಸಂಬಂಧ ಬಿಬಿಎಂಪಿ ಅಧಿಕಾರಿಗಳಿಗೆ ಸಂಬಂಧಿಸಿದ ಐದಕ್ಕೂ ಅಧಿಕ ಸ್ಥಳಗಳಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದರು.
ಇಲ್ಲಿನ ದೇವಯ್ಯ ಪಾರ್ಕ್ ಬಳಿ ಇರುವ ಬಿಬಿಎಂಪಿ ಕಲ್ಯಾಣಾಧಿಕಾರಿ ಲಲಿತಾ, ವಯ್ಯಾಲಿಕಾವಲ್ನಲ್ಲಿರುವ ಉಪ ಹಣಕಾಸು ನಿಯಂತ್ರಕ ಸತ್ಯಮೂರ್ತಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಮಾಡಿ, ಶೋಧ ನಡೆಸಿದರು.
ಬಿಬಿಎಂಪಿ ಪಶ್ಚಿಮ ವಲಯದ ಕಲ್ಯಾಣ ವಿಭಾಗದ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಫಲಾನುಭವಿಗಳ ಹಣವನ್ನು ಅಕ್ರಮವಾಗಿ ಸೊಸೈಟಿಗಳಿಗೆ ವರ್ಗಾಯಿಸಿದ್ದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್ಪಿ ಶ್ರೀನಾಥ್ ಜೋಷಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸುನೀಲ್ ವೈ ನಾಯಕ್ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.
ಅದೇ ರೀತಿ, ಆರ್ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಕುರಿತು ಸರಣಿ ದೂರುಗಳ ಹಿನ್ನೆಲೆ ತುಮಕೂರು ಜಿಲ್ಲೆ ಮಧುಗಿರಿ, ತಿಪಟೂರು ಆರ್ಟಿಒ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸಿದರು.