ಒಳಮೀಸಲಾತಿ ಜಾರಿಯಲ್ಲಿ ವಿಳಂಬ ನೀತಿ ಬೇಡ : ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹ

ಬೆಂಗಳೂರು : ಸುಪ್ರೀಂ ಕೋರ್ಟ್ ಆದೇಶದಂತೆ ಸೂಕ್ತವಾದ ದತ್ತಾಂಶಗಳನ್ನು ಪರಿಗಣಿಸಿ ವಿಳಂಬ ನೀತಿ ಅನುಸರಿಸದೆ, ರಾಜ್ಯ ಸರಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಬೇಕು ಎಂದು ಒಳಮೀಸಲಾತಿ ಜಾರಿಗಾಗಿ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ ಆಗ್ರಹಿಸಿದೆ.
ಬುಧವಾರ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ನೀಡಿದ ಒಕ್ಕೂಟದ ನಿಯೋಗ, ನ್ಯಾ.ಸದಾಶಿವ ಆಯೋಗದ ವರದಿಯ ಒಳಮೀಸಲಾತಿ ವರ್ಗೀಕರಣದ ಶಿಫಾರಸ್ಸನ್ನು ಪರಿಗಣಿಸಿ ಹೆಚ್ಚಳವಾಗಿರುವ ಮೀಸಲಾತಿಯ ಶೇ.17ರ ಅನುಪಾತದಲ್ಲಿ ಹೆಚ್ಚುವರಿ ಶೇ.2ರಷ್ಟು ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಎಬಿಸಿಡಿ ವರ್ಗೀಕರಣದ ಗುಂಪುಗಳಿಗೆ ಸಮಾನವಾಗಿ ಹಂಚಬೇಕು. ಆಪೈಕಿ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶೇ.7ರಷ್ಟು ಮೀಸಲಾತಿ ನಿಗಧಿಪಡಿಸಬೇಕು ಎಂದು ಒತ್ತಾಯಿಸಿದೆ.
ಸಚಿವ ಸಂಪುಟವು ನಿರ್ಣಯದಂತೆ ಒಳಮೀಸಲಾತಿ ಜಾರಿಯಾಗುವವರೆಗೂ ಸರಕಾರಿ ಉದ್ಯೋಗಗಳಲ್ಲಿ ಸುಮಾರು 37 ಸಾವಿರ ಹುದ್ದೆಗಳ ನೇಮಕಾತಿಗಳನ್ನು ತಡೆಹಿಡಿಯಬೇಕು. ನಿಜವಾದ 49 ಅಲೆಮಾರಿಗಳನ್ನು ಪ್ರತ್ಯೇಕವಾಗಿ ಗುರುತಿಸಿ ಶೇ.1 ಕ್ಕಿಂತ ಹೆಚ್ಚು ಒಳಮೀಸಲಾತಿಯನ್ನು ನೀಡಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿದೆ.
ಸಮಾಜ ಕಲ್ಯಾಣ ಇಲಾಖೆಯ ಬಜೆಟ್‍ನಲ್ಲಿ ಮತ್ತು ಎಸ್‍ಸಿಎಸ್‍ಪಿ, ಟಿಎಸ್‍ಪಿ ಅನುದಾನದಲ್ಲಿ ಮಾದಿಗ, ಸಮಗಾರ, ಡೋಹರ, ಮಚಗಾರ ಸಮುದಾಯಗಳ ಜನಸಂಖ್ಯೆಯ ಆಧಾರದ ಮೇಲೆ ಪ್ರತ್ಯೇಕವಾಗಿ ಅನುದಾನ ಮೀಸಲಿಟ್ಟ ಅದೇ ವರ್ಷ ವೆಚ್ಚ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ನಿಯೋಗ ಆಗ್ರಹಿಸಿದೆ.
ನಿಯೋಗದಲ್ಲಿ ಬಿಎಸ್‍ಪಿ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಡಾ.ಎನ್.ಮೂರ್ತಿ, ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಕಾರ್ಯಾಧ್ಯಕ್ಷ ಕೇಶವಮೂರ್ತಿ, ವಿಶ್ವ ಆದಿ ಜಾಂಬವ ಮಹಾಸಭಾದ ಅಧ್ಯಕ್ಷ ಡಾ.ಭೀಮರಾಜ್ ಮತ್ತಿತರರು ಹಾಜರಿದ್ದರು.