ರಾಜ್ಯ ಸರಕಾರ ಉಚಿತ, ಉಚಿತ ಎಂದು ಹೇಳಿ ಜನರ ಜೀವನವನ್ನೆ ದುಬಾರಿ ಮಾಡಿದೆ : ಪ್ರಹ್ಲಾದ್ ಜೋಶಿ

ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ : ರಾಜ್ಯ ಸರಕಾರ ಉಚಿತ, ಉಚಿತ ಎಂದು ಹೇಳಿ ಜನರ ಜೀವನವನ್ನೆ ದುಬಾರಿ ಮಾಡಿದೆ. ರಾಜ್ಯದಲ್ಲಿ ಸಾಯುವುದಕ್ಕೂ ದುಡ್ಡು ಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.
ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿದ್ದಾರೆ. ಜನರಿಗೆ, ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲು ಈ ಸರಕಾರಕ್ಕೆ ಆಗುತ್ತಿಲ್ಲ. ಜನ ಸಾಯಬೇಕಾದರೂ ಈ ಸರಕಾರಕ್ಕೆ ದುಡ್ಡು ಕೊಟ್ಟು ಸಾಯಬೇಕು ಅಂತಹ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದು ಕಿಡಿಗಾರಿದರು.
ಕಾಂಗ್ರೆಸ್ನವರು ಬೇಕಾಬಿಟ್ಟಿ ಅಧಿಕಾರ ಮಾಡುವಂತಹ ದಪ್ಪ ಚರ್ಚದವರು. ಈ ಸರಕಾರ ಸಂಪೂರ್ಣ ದಿವಾಳಿಯಾಗಿದೆ. ಗ್ಯಾರಂಟಿಗಳು ಎಲ್ಲರಿಗೂ ತಲುಪಿಲ್ಲ. ಗೃಹಲಕ್ಷ್ಮಿ ಹಣ ಕೊಡಲು ಇವರಿಗೆ ಸಾಧ್ಯವಾಗದೆ, ದಿನಗಳನ್ನು ದೂಡುತ್ತಿದ್ದಾರೆ. ಪರಿಶಿಷ್ಟ ಸಮುದಾಯದವರಿಗೆ ಮೀಸಲಿಟ್ಟಿದ್ದ ಎಸ್ಸಿಪಿ, ಟಿಎಸ್ಪಿ ಹಣವನ್ನೂ ಗ್ಯಾರಂಟಿಗಳಿಗೆ ಬಳಕೆ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅನುಕೂಲಕ್ಕೆ ತಕ್ಕಂತೆ ಉತ್ತರ ಕೊಡುತ್ತಾರೆ ಎಂದು ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಎಲ್ಲ ಇಲಾಖೆಗಳಿಗೂ ಭ್ರಷ್ಟಾಚಾರ ವ್ಯಾಪಿಸಿದೆ. ರಾಜ್ಯದ ಖಜಾನೆ ಖಾಲಿಯಾಗಿದೆ. ಆಡಳಿತ ನಡೆಸಲು ಆಗುತ್ತಿಲ್ಲ. ರಾಜಧಾನಿ ಬೆಂಗಳೂರಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕೊಡಲು ಆಗಲ್ಲ ಎಂದು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಾರೆ ಎಂದು ಅವರು ಕಿಡಿಗಾರಿದರು.
ನಗರಕ್ಕೆ ಮೂಲಸೌಕರ್ಯಗಳನ್ನು ಕೊಡಿ ಎಂದು ಕೇಳುವ ಉದ್ಯಮಿಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸುತ್ತಾರೆ. ಇಂತಹ ದುರಹಂಕಾರದ ವರ್ತನೆ ಸರಿಯಲ್ಲ. ಸಾರ್ವಜನಿಕ ಜೀವನದಲ್ಲಿ ಹೇಗೆ ಇರಬೇಕು ಎಂಬುದನ್ನು ಪ್ರಿಯಾಂಕ್ ಖರ್ಗೆ ತಮ್ಮ ತಂದೆಯನ್ನು ನೋಡಿ ಕಲಿಯಲಿ ಎಂದು ಪ್ರಹ್ಲಾದ್ ಜೋಶಿ ಹೇಳಿದರು.
ಮರಾಠಿ ಮಾತನಾಡಲು ಬರುವುದಿಲ್ಲ ಎಂದು ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ನಡೆದ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಿರುವುದು ಸರಿಯಾದ ಕ್ರಮವಲ್ಲ. ಕಂಡಕ್ಟರ್ ಮೇಲೆ ನಡೆದ ಹಲ್ಲೆಯೂ ಅಕ್ಷಮ್ಯ ಅಪರಾಧ. ಹಲ್ಲೆ ಮಾಡಿದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಇದಕ್ಕೆ ಕೇಂದ್ರ ಸರಕಾರವು ಸಹಮತ ವ್ಯಕ್ತಪಡಿಸುತ್ತದೆ ಎಂದು ಅವರು ಹೇಳಿದರು.
ಸೇಡಿನ ರಾಜಕಾರಣ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮತ್ತೊಮ್ಮೆ ಕಾನೂನು ಕ್ರಮಕ್ಕೆ ಅನುಮತಿ ಕೋರಿರುವ ಸರಕಾರವು ಸೇಡಿನ ರಾಜಕಾರಣ ನಡೆಸುತ್ತಿದೆ ಎಂದು ಪ್ರಹ್ಲಾದ್ ಜೋಶಿ ಟೀಕಿಸಿದರು.