ಕೆಎಸ್ಸಾರ್ಟಿಸಿಯಲ್ಲಿ ಮಹಿಳೆಯರಿಗೆ ಎಲ್ಲ ರೀತಿಯ ಅನುಕೂಲ: ರಾಮಲಿಂಗಾರೆಡ್ಡಿ

ಬೆಂಗಳೂರು : ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಎಲ್ಲಾ ರೀತಿಯಿಂದಲೂ ಅನುಕೂಲ ಕಲ್ಪಿಸಲಾಗುತ್ತಿದೆ. ಮಾರ್ಗಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಿರ್ವಾಹಕಿಯರಿಗೂ ಕೂಡ ಮಾರ್ಗ ನಿಯೋಜನೆಯಲ್ಲಿ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಶನಿವಾರ ಕರಾರಸಾ ನಿಗಮದ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಮಹಿಳಾದಿನಾಚರಣೆಯಲ್ಲಿ ಮಾತನಾಡಿದ ಅವರು, ಮಹಿಳಾ ಸಮಾನತೆ, ಸಬಲೀಕರಣ ಎಂಬುದನ್ನು ನಮ್ಮಲ್ಲಿ ಅಕ್ಷರಶಃ ಕಾಣಬಹುದಾಗಿದೆ ಎಂದು ತಿಳಿಸಿದರು.
ಇಂದು ಎಲ್ಲ ರಂಗಗಳಲ್ಲಿಯೂ ಮಹಿಳೆಯರು ಪುರುಷರಿಗೆ ಸಮಾನವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಮ್ಮ ನಿಗಮದ ತಾಂತ್ರಿಕ ಸಿಬ್ಬಂದಿಗಳು ಪುರುಷ ಸಿಬ್ಬಂದಿಗಳಷ್ಟೇ ಹೆಚ್ಚಿನ ಕಾರ್ಯ ಕ್ಷಮತೆಯಿಂದ ಕಾರ್ಯನಿರ್ವಹಿಸಿ, ವಾಹನಗಳ ಪುನಃಶ್ಚೇತನ ಕಾರ್ಯದಲ್ಲಿ ಮುಂಚೂಣಿಯಲ್ಲಿರುವುದು ಅಭಿನಂದನೀಯ ಎಂದರು.
ಇದೇ ವೇಳೆ ನಿಗಮದ 17 ವಿಭಾಗಗಳಿಂದ ತಲಾ ಒಬ್ಬರಂತೆ ಉತ್ತಮ ಕಾರ್ಯ ಸಾಧನೆ ತೋರಿದ, ತಾಂತ್ರಿಕ ಸಿಬ್ಬಂದಿ-19, ನಿರ್ವಾಹಕರು-16, ಹಾಗೂ ಕರಾಸಾ ಪೇದೆ-7, ಒಟ್ಟು 42 ಮಹಿಳಾ ಸಿಬ್ಬಂದಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಪದ್ಮಶ್ರೀ ಪುರಸ್ಕೃತ ಕೊಪ್ಪಳದ ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ, ನಿರ್ದೇಶಕಿ ಡಾ.ನಂದಿನಿದೇವಿ ಕೆ ಮತ್ತಿತರರು ಉಪಸ್ಥಿತರಿದ್ದರು.