ಲೈಂಗಿಕ ಹಗರಣ: ಪ್ರಜ್ವಲ್ ರೇವಣ್ಣರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ
Photo source: PTI
ಬೆಂಗಳೂರು, ಮೇ 31: ‘ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ’ ಆರೋಪದಡಿ ಬಂಧಿತ ಹಾಸನ ಸಂಸದ ಪ್ರಜ್ವಲ್ ರೇವಣ್ಣ ರನ್ನು ಎಸ್ಐಟಿ ಅಧಿಕಾರಿಗಳು ಇಂದು (ಮೇ 31) ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ. ಜೊತೆಗೆ, ವಿಚಾರಣೆಗಾಗಿ ಅವರನ್ನು ಕಸ್ಟಡಿಗೆ ಪಡೆಯಲು ಸಿದ್ಧತೆ ಮಾಡಿಕೊಂಡಿದ್ದಾರೆ.
ಪ್ರಜ್ವಲ್ ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಪ್ರಕರಣದಲ್ಲಿ ಇದುವರೆಗೂ ಕಲೆಹಾಕಿರುವ ಮಾಹಿತಿಯನ್ನು ನ್ಯಾಯಾಲಯಕ್ಕೆ ತಿಳಿಸಲಾಗುವುದು. ಆರೋಪಿಯ ವಿಚಾರಣೆ ಅಗತ್ಯವಿರುವುದಾಗಿ ನ್ಯಾಯಾಲಯಕ್ಕೆ ಹೇಳಿ ಕಸ್ಟಡಿಗೆ ಪಡೆಯಲಾಗುವುದು ಎಂದು ಎಸ್ಐಟಿ ಮೂಲಗಳು ಹೇಳಿವೆ.
ಹೊಳೆನರಸೀಪುರ ಟೌನ್ ಹಾಗೂ ಸಿಐಡಿ ಠಾಣೆಗಳಲ್ಲಿ ದಾಖಲಾಗಿರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಂಸದ ಪ್ರಜ್ವಲ್, ಬಂಧನ ಭೀತಿಯಲ್ಲಿ ಕಳೆದ 35 ದಿನಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದರು. ಗುರುವಾರ ತಡರಾತ್ರಿ ಜರ್ಮನಿಯಿಂದ ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಜ್ವಲ್ ರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಇವರ ಬಂಧನಕ್ಕೆ ಬ್ಲೂ ಕಾರ್ನರ್ ನೋಟಿಸ್ ಹಾಗೂ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿತ್ತು.