ರಾಜ್ಯ ಬಜೆಟ್ | ಸರಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಪ್ರವರ್ಗ 2ಬಿ ಗುತ್ತಿಗೆದಾರರಿಗೆ ಮೀಸಲಾತಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ 2025-26ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಸರಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮ(ಪ್ರವರ್ಗ 2 ಬಿ)ರಿಗೂ ಮೀಸಲಾತಿ ಘೋಷಿಸಿದ್ದಾರೆ.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದನ್ವಯ ಎರಡು ಕೋಟಿ ರೂ. ಮೊತ್ತದವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತ್ತು 2ಬಿ ಗುತ್ತಿಗೆದಾರರಿಗೆ ಮೀಸಲಾತಿ ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಅದೇರೀತಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮದನ್ವಯ ಸರಕಾರದ ವಿವಿಧ ಇಲಾಖೆ, ನಿಗಮ ಹಾಗೂ ಸಂಸ್ಥೆಗಳಲ್ಲಿ ಖರೀದಿಸುವ ಸರಕು ಮತ್ತು ಸೇವೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತ್ತು 2ಬಿ ಸರಬರಾಜುದಾರರಿಗೆ ಒಂದು ಕೋಟಿ ರೂ. ವರೆಗೆ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ ಒಟ್ಟು 31 ವಸತಿ ಶಾಲೆಗಳನ್ನು ಪಿ.ಯು ಕಾಲೇಜನ್ನಾಗಿ ಉನ್ನತೀಕರಿಸಲಾಗುವುದು. ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 26 ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು ಎಂದವರು ತಿಳಿಸಿದ್ದಾರೆ.
ಪರಿಶಿಷ್ಟ ಜಾತಿಯ 40, ಪರಿಶಿಷ್ಟ ಪಂಗಡದ ಏಳು ಮತ್ತು ಹಿಂದುಳಿದ ವರ್ಗಗಳ 14 ವಸತಿ ಶಾಲೆಗಳು ಸೇರಿದಂತೆ ನಿವೇಶನ ಲಭ್ಯವಿರುವ ಒಟ್ಟು 61 ಕ್ರೈಸ್ ವಸತಿ ಶಾಲೆಗಳಿಗೆ 1,292 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಿಸಲಾಗುವುದು ಎಂದು ಸಿಎಂ ಪ್ರಕಟಿಸಿದ್ದಾರೆ.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮಾಡಿರುವ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾನಿಲಯಗಳಲ್ಲಿ ವ್ಯಾಸಂಗಕ್ಕೆ ಆಯ್ಕೆಯಾಗುವ ಇಬ್ಬರು ವಿದ್ಯಾರ್ಥಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ಯೋಜನೆಯಡಿ ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಘೋಷಿಸಿದರು.
ನಿರಾಶ್ರಿತರ ಮಾನಸಿಕ ಸ್ವಸ್ಥತೆಗಾಗಿ ಬೆಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಮಾನಸಿಕ ಆರೋಗ್ಯ ಕೇಂದ್ರವನ್ನು ಸ್ಥಾಪಿಸಲಾಗುವುದು. ವಿದ್ಯಾರ್ಥಿನಿಲಯಗಳಲ್ಲಿ ನೀಡಲಾಗುತ್ತಿರುವ ಆಹಾರ ವ್ಯವಸ್ಥೆಯ ಬಗ್ಗೆ ಪಾರದರ್ಶಕತೆಯನ್ನು ತರಲು ಸಾಮಾಜಿಕ ಪರಿಶೋಧನೆ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ಬಂಜಾರ ಸಮುದಾಯದ ಪ್ರಮುಖ ಧಾರ್ಮಿಕ ಸ್ಥಳವಾದ ದಾವಣಗೆರೆ ಜಿಲ್ಲೆಯ ಸಂತ ಸೇವಾಲಾಲ್ ಪುಣ್ಯಕ್ಷೇತ್ರ ಸೂರಗೊಂಡನ ಕೊಪ್ಪದಲ್ಲಿ ಒಂದು ವಸತಿ ಶಾಲೆಯನ್ನು ಕ್ರೈಸ್ ವತಿಯಿಂದ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ದೇಶದ ಪ್ರತಿಷ್ಠಿತ 100 ಶಿಕ್ಷಣ ಸಂಸ್ಥೆಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ಪ್ರೋತ್ಸಾಹಧನ ನೀಡಲಾಗುವುದು.
ಸರಕಾರಿ ಮತ್ತು ಖಾಸಗಿ ಮೆಡಿಕಲ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳು ಅದೇ ಕಾಲೇಜಿನ ವಸತಿ ನಿಲಯಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ, ಅವರಿಗೆ ವಸತಿ ನಿಲಯದ ವೆಚ್ಚವಾಗಿ ಪ್ರತೀ ತಿಂಗಳು 3,500 ರೂ. ಪಾವತಿಸಲಾಗುವುದು.
ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಸಮುದಾಯದವರು ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ.50ರಷ್ಟು ಅಥವಾ ಗರಿಷ್ಠ 1.25 ಲಕ್ಷ ರೂ. ಸಹಾಯಧನವನ್ನು ನಿಗಮದ ಮೂಲಕ ನೀಡಲಾಗುವುದು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವ ಒಂದು ಲಕ್ಷ ರೂ. ಸಾಲ ಮತ್ತು 1.50 ಲಕ್ಷ ರೂ. ಸಹಾಯಧನವನ್ನು 2.50 ಲಕ್ಷ ರೂ. ಸಾಲ ಮತ್ತು 2.50 ಲಕ್ಷ ರೂ. ಸಹಾಯಧನ ಮೊತ್ತಕ್ಕೆ ಹೆಚ್ಚಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26ನೇ ಸಾಲಿನಲ್ಲಿ 488 ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ ಎಂದವರು ತಿಳಿಸಿದ್ದಾರೆ.