ಫೆ.28ಕ್ಕೆ ಬೆಂಗಳೂರಿನ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಸಿಎಂ ಭೇಟಿ : ವಿಜಯೇಂದ್ರ

ಬೆಂಗಳೂರು : ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಫೆ.28ರಂದು ಬಿಜೆಪಿ ಪಕ್ಷದ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯಮಂತ್ರಿಯನ್ನು ಭೇಟಿ ಮಾಡಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಮಂಗಳವಾರ ನಗರದಲ್ಲಿ ಬಿಜೆಪಿ ಶಾಸಕರು, ಸಂಸದರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮಹಾನಗರದ ಅಭಿವೃದ್ಧಿಗೆ ಬಜೆಟ್‍ನಲ್ಲಿ ಹೆಚ್ಚು ಅನುದಾನ ನೀಡಬೇಕೆಂದು ಒತ್ತಾಯಿಸಿ ಮನವಿ ನೀಡುತ್ತೇವೆ. ಬೆಂಗಳೂರಿನ ಜ್ವಲಂತ ಸಮಸ್ಯೆಗಳ ಕುರಿತು ಮುಂದಿನ ದಿನಗಳಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹೋರಾಟ ಕೈಗೆತ್ತಿಕೊಳ್ಳಲಿದ್ದು, ಅದರ ಬಗ್ಗೆಯೂ ಚರ್ಚೆ ಮಾಡಿದ್ದೇವೆ ಎಂದರು.
ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆ ಆಗಬೇಕು. ಗ್ರೇಟರ್ ಬೆಂಗಳೂರು ಪ್ರಸ್ತಾಪ ಕೈಬಿಡಬೇಕು. ಟನೆಲ್ ರಸ್ತೆ ಯೋಜನೆ ಕೈಬಿಟ್ಟು ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಪರಿಹರಿಸಲು ಸರಕಾರ ಚಿಂತಿಸಬೇಕಿದೆ. ಬೆಂಗಳೂರು ನಗರದ ರಸ್ತೆ ಗುಂಡಿಗಳನ್ನು ಮುಚ್ಚಲೂ ಈ ಸರಕಾರಕ್ಕೆ ಆಗುತ್ತಿಲ್ಲ. ಆದರೆ, ಟನೆಲ್ ರಸ್ತೆ ಕುರಿತು ಮಾತನಾಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
ಟನೆಲ್ ರಸ್ತೆ ಯೋಜನೆ ಕೈಬಿಟ್ಟು ಮೆಟ್ರೋ ಬೋಗಿಗಳನ್ನು ಹೆಚ್ಚಿಸಬೇಕು. ಟ್ರಾಫಿಕ್ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ ಬದಲಿ ಮಾರ್ಗೋಪಾಯಗಳನ್ನು ಚರ್ಚಿಸಬೇಕಿದೆ. ಬೆಂಗಳೂರು ನಗರದ ನಮ್ಮ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ನೇತೃತ್ವದಲ್ಲಿ ಇವತ್ತು ಸಭೆ ನಡೆಸಿದ್ದೇವೆ. ಈಚೆಗೆ ರಾಜ್ಯ ಸರಕಾರವು ಮೆಟ್ರೋ ಪ್ರಯಾಣ ದರ ಏರಿಸಿದ್ದು, ಅದರ ವಿರುದ್ಧ ಮತ್ತು ದರ ಇಳಿಕೆಗೆ ಒತ್ತಾಯಿಸಿ ಹೋರಾಟ ಮಾಡುವ ಕುರಿತು ಚರ್ಚೆ ಮಾಡಲಾಗಿದೆ ಎಂದು ಅವರು ವಿವರಿಸಿದರು.
ಇ ಖಾತಾದಿಂದ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆ ಆಗುತ್ತಿದೆ. ಗ್ರೇಟರ್ ಬೆಂಗಳೂರು ಎಂಬ ಕಥೆ ಹೇಳಿಕೊಂಡು ಬಿಬಿಎಂಪಿ ಚುನಾವಣೆ ಮುಂದೂಡುವ ಷಡ್ಯಂತ್ರ ನಡೆಯುತ್ತಿದೆ. ರಾಜ್ಯ ಸರಕಾರವು ಬೆಂಗಳೂರಿನ ಉದ್ಧಾರದ ಕಥೆ ಹೇಳುತ್ತ ಚುನಾವಣೆ ಮುಂದೂಡುವ ಪ್ರಯತ್ನ ಮಾಡುತ್ತಿದೆ. ಅದಕ್ಕೆ ಅವಕಾಶ ಕೊಡಬಾರದು. ಸರಕಾರವು ತಕ್ಷಣವೇ ಬಿಬಿಎಂಪಿ ಚುನಾವಣೆ ನಡೆಸಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಂಸದರಾದ ಪಿ.ಸಿ.ಮೋಹನ್, ತೇಜಸ್ವಿ ಸೂರ್ಯ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಶಾಸಕರಾದ ಗೋಪಾಲಯ್ಯ, ಎಸ್.ಆರ್.ವಿಶ್ವನಾಥ್, ಸಿ.ಕೆ.ರಾಮಮೂರ್ತಿ, ಎಂ.ಕೃಷ್ಣಪ್ಪ, ರವಿ ಸುಬ್ರಮಣ್ಯ, ಬೈರತಿ ಬಸವರಾಜ್, ಉದಯ ಗರುಡಾಚಾರ್, ಬೆಂಗಳೂರಿನ ಮೂರು ಜನ ಜಿಲ್ಲಾಧ್ಯಕ್ಷರು, ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ ಇದ್ದರು.