ಬೆಂಗಳೂರು: ನೆಲಮಂಗಲದಲ್ಲಿ ಭೀಕರ ಸರಣಿ ರಸ್ತೆ ಅಪಘಾತ: ಇಬ್ಬರು ಮಕ್ಕಳ ಸಹಿತ 6 ಮಂದಿ ಮೃತ್ಯು
ಕಾರಿನ ಮೇಲೆ ಉರುಳಿಬಿದ್ದ ಕಂಟೈನರ್ ಲಾರಿ
ಬೆಂಗಳೂರು: ಭೀಕರ ಸರಣಿ ಅಪಘಾತ ಸಂಭವಿಸಿದ ವೇಳೆ ಕಂಟೈನರ್ ಲಾರಿಯೊಂದು ಕಾರೊಂದರ ಮೇಲೆ ಉರುಳಿಬಿದ್ದ ಪರಿಣಾಮ ಕಾರಿನಲ್ಲಿ ಆರು ಮಂದಿ ಲಾರಿಯಡಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ನೆಲಮಂಗಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ಈ ಅಪಘಾತ ಸಂಭವಿಸಿದೆ. ಎರಡು ಕಾರು, ಎರಡು ಲಾರಿ, ಸ್ಕೂಲ್ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಲಾರಿಗಳು ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಕಂಟೈನರ್ ಲಾರಿ ಪಕ್ಕದಲ್ಲಿ ಚಲಿಸುತ್ತಿದ್ದ ಕಾರೊಂದರ ಮೇಲೆ ಬಿದ್ದಿದೆ. ಕಂಟೇನರ್ ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ಅದರೊಳಗಿದ್ದ ಎಲ್ಲಾ ಪ್ರಯಾಣಿಕರ ದೇಹಗಳು ಛಿದ್ರಛಿದ್ರವಾಗಿವೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಹಾಗೂ ಇಬ್ಬರು ಮಕ್ಕಳು ಸೇರಿ ಒಟ್ಟು 6 ಮಂದಿಯಿದ್ದು, ಅವರೆಲ್ಲ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯ ಉದ್ಯಮಿ ಚಂದ್ರ ಯಾವಪ್ಪವೋಳ,16 ವರ್ಷದ ಜಾನ್, 12 ವರ್ಷದ ದೀಕ್ಷಾ, 36 ವರ್ಷದ ವಿಜಯ ಲಕ್ಷ್ಮಿ, 42 ವರ್ಷದ ಗೌರಬಾಯಿ ಎಂದು ಗುರುತಿಸಲಾಗಿದೆ.
ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಟ್ರಾಫಿಕ್ ಸಮಸ್ಯೆ ಕಾಣಿಸಿಕೊಂಡಿದೆ. ಎರಡು ರಸ್ತೆಗಳಲ್ಲಿ 10 ಕಿ.ಮೀ. ಗೂ ಹೆಚ್ಚು ಉದ್ದದ ಟ್ರಾಫಿಕ್ ಜಾಮ್ ಉಂಟಾಗಿದೆ.
ಘಟನಾ ಸ್ಥಳಕ್ಕೆ ನೆಲಮಂಗಲ ಪೊಲೀಸರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಸಿ.ಕೆ.ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.